ನವದೆಹಲಿ: ಇಂದು (ಸ.09) ನಡೆದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿಯವರನ್ನು ಸೋಲಿಸಿ ಗೆಲುವು ಸಾಧಿಸಿದ್ದಾರೆ. ಜಗದೀಪ್ ಧನಕರ್ ಅವರ ಅನಿರೀಕ್ಷಿತ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 427 ಶಾಸಕರು ರಾಧಾಕೃಷ್ಣನ್ ಅವರಿಗೆ ಮತ ಚಲಾಯಿಸಿದ್ದಾರೆ. ಈ ಮೂಲಕ ಅವರು ಭಾರತದ 15ನೇ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆಯಲ್ಲಿ ಬಿಜು ಜನತಾದಳ (ಬಿಜೆಡಿ), ಭಾರತೀಯ ರಾಷ್ಟ್ರ ಸಮಿತಿ (ಬಿಆರ್‌ಎಸ್), ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮತ್ತು 13 ಸ್ವತಂತ್ರ ಶಾಸಕರು ಮತದಾನದಿಂದ ದೂರ ಉಳಿದಿದ್ದಾರೆ. ವಿರೋಧ ಪಕ್ಷದ 315 ಸಂಸದರು ಚುನಾವಣೆಯಲ್ಲಿ ಭಾಗವಹಿಸಿದ್ದು, ಇದು 100% ಮತದಾನದ ಅಭೂತಪೂರ್ವ ದಾಖಲೆ ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಹೇಳಿದ್ದಾರೆ. “ವಿರೋಧ ಪಕ್ಷಗಳು ಒಗ್ಗಟ್ಟಾಗಿ ನಿಂತಿವೆ. ನಮ್ಮ 315 ಸಂಸದರೆಲ್ಲರೂ ಮತದಾನದಲ್ಲಿ ಭಾಗವಹಿಸಿದ್ದಾರೆ,” ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಅವರು ತಮ್ಮ ಎಕ್ಸ್‌ನಲ್ಲಿ ಬರೆದಿದ್ದಾರೆ.
ಸಿ.ಪಿ. ರಾಧಾಕೃಷ್ಣನ್‌ರ ರಾಜಕೀಯ ಹಿನ್ನೆಲೆ
ಪ್ರಸ್ತುತ ಮಹಾರಾಷ್ಟ್ರದ ರಾಜ್ಯಪಾಲರಾಗಿರುವ 67 ವರ್ಷದ ಸಿ.ಪಿ. ರಾಧಾಕೃಷ್ಣನ್ ತಮಿಳುನಾಡಿನ ಬಿಜೆಪಿಯ ಹಿರಿಯ ನಾಯಕರಾಗಿದ್ದಾರೆ. ಅವರ ರಾಜಕೀಯ ಜೀವನವು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಜನ ಸಂಘದೊಂದಿಗಿನ ಸಂಬಂಧದಿಂದ ಆರಂಭವಾಯಿತು. ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತಾವಧಿಯಲ್ಲಿ ಕೊಯಮತ್ತೂರಿನಿಂದ ಎರಡು ಬಾರಿ ಲೋಕಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ನಂತರ ತಮಿಳುನಾಡಿನಲ್ಲಿ ಬಿಜೆಪಿಯನ್ನು ಮುನ್ನಡೆಸಿದ ಅವರು ರಾಜಕೀಯ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.