ಬಂಗಾಳಕೊಲ್ಲಿಯಲ್ಲಿ ಮುರಸು ಚಂಡಮಾರುತ ಅಬ್ಬರ: ಆಂಧ್ರ, ತಮಿಳುನಾಡು, ಒಡಿಶಾದಲ್ಲಿ ಹೈ ಅಲರ್ಟ್

Untitled Design 2026 11 02T112542.788

ವಿಶಾಖಪಟ್ಟಣ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರೂಪುಗೊಂಡಿದ್ದ ಮುರಸು (Murasu Cyclone) ಚಂಡಮಾರುತ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಚಂಡಮಾರುತದ ಪ್ರಭಾವದಿಂದ ದಕ್ಷಿಣ ಭಾರತದ ಕರಾವಳಿ ಭಾಗಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಒಡಿಶಾ ರಾಜ್ಯಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ, ನವೆಂಬರ್ 2ರ ಮಧ್ಯರಾತ್ರಿಯಿಂದ ನವೆಂಬರ್ 3ರ ಮುಂಜಾನೆಯವರೆಗೆ ಚಂಡಮಾರುತ ಆಂಧ್ರಪ್ರದೇಶದ ದಕ್ಷಿಣ ಕರಾವಳಿಯನ್ನು ಅಪ್ಪಳಿಸುವ ಸಾಧ್ಯತೆಯಿದೆ.

ಬಂಗಾಳಕೊಲ್ಲಿಯ ಪಶ್ಚಿಮ ಮಧ್ಯ ಮತ್ತು ನೈಋತ್ಯ ಭಾಗದಲ್ಲಿ ಕೇಂದ್ರೀಕೃತವಾಗಿರುವ ಮುರಸು ಚಂಡಮಾರುತ ಕಳೆದ ಕೆಲವು ಗಂಟೆಗಳಲ್ಲಿ ಮತ್ತಷ್ಟು ಬಲಗೊಂಡಿದೆ. ಇದು ಗಂಟೆಗೆ ಸುಮಾರು 20 ಕಿ.ಮೀ. ವೇಗದಲ್ಲಿ ವಾಯವ್ಯ ದಿಕ್ಕಿನತ್ತ ಚಲಿಸುತ್ತಿದ್ದು, ತೀವ್ರ ಚಂಡಮಾರುತವಾಗಿ ಪರಿವರ್ತನೆಯಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಚಂಡಮಾರುತವು ಆಂಧ್ರಪ್ರದೇಶದ ಕರಾವಳಿ ತಲುಪುವ ವೇಳೆಗೆ ಗಂಟೆಗೆ 100ರಿಂದ 110 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. 

ನೆಲ್ಲೂರು–ನರಸಾಪುರ ನಡುವೆ ಚಂಡಮಾರುತ ಭೂಕುಸಿತ ಸಾಧ್ಯತೆ

ಮುರಸು ಚಂಡಮಾರುತವು ಆಂಧ್ರಪ್ರದೇಶದ ನೆಲ್ಲೂರು ಮತ್ತು ನರಸಾಪುರ ನಡುವಿನ ಕರಾವಳಿ ಭಾಗದಲ್ಲಿ, ಒಂಗೋಲ್ ಸಮೀಪ ಭೂಕುಸಿತವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತ ಅಪ್ಪಳಿಸುವ ಸಂದರ್ಭದಲ್ಲಿ ಬಿರುಗಾಳಿ, ಭಾರಿ ಮಳೆ ಹಾಗೂ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ನಿರೀಕ್ಷೆಯಿದೆ.

ಈ ಹಿನ್ನೆಲೆ ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ತಗ್ಗು ಪ್ರದೇಶಗಳು, ಸಮುದ್ರ ತೀರದ ಗ್ರಾಮಗಳು ಹಾಗೂ ಅಪಾಯದ ಸಾಧ್ಯತೆ ಇರುವ ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. 

ಆಂಧ್ರ, ತಮಿಳುನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ

ಚಂಡಮಾರುತದ ಪ್ರಭಾವದಿಂದ ಆಂಧ್ರಪ್ರದೇಶದ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ ಅತಿ ಭಾರಿ ಮಳೆಯಾಗುವ ಆತಂಕವೂ ಇದೆ. ನಿರಂತರ ಮಳೆಯಿಂದ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಸಾಧ್ಯತೆಯಿದ್ದು, ನದಿ, ಹಳ್ಳ ಹಾಗೂ ಚರಂಡಿಗಳಲ್ಲಿ ನೀರಿನ ಹರಿವು ಹೆಚ್ಚಾಗಬಹುದು. ಹೀಗಾಗಿ ಜನರು ಅನಗತ್ಯವಾಗಿ ಮನೆಯಿಂದ ಹೊರಬರದಂತೆ ಮತ್ತು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇತ್ತ ತಮಿಳುನಾಡಿನಲ್ಲಿಯೂ ಚಂಡಮಾರುತದ ಪರಿಣಾಮ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ನವೆಂಬರ್ 2ರಂದು ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. 

ಒಡಿಶಾದಲ್ಲೂ ಮುನ್ನೆಚ್ಚರಿಕೆ ಕ್ರಮ

ಮುರಸು ಚಂಡಮಾರುತದ ಪ್ರಭಾವ ಒಡಿಶಾದ ದಕ್ಷಿಣ ಭಾಗಗಳ ಮೇಲೂ ಬೀರುವ ಸಾಧ್ಯತೆಯಿದೆ. ಈ ಹಿನ್ನೆಲೆ ಕರಾವಳಿ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ದಕ್ಷಿಣ ಒಡಿಶಾದ ಕೆಲವು ಜಿಲ್ಲೆಗಳಲ್ಲಿ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಬಂದರುಗಳಲ್ಲಿ ಸ್ಥಳೀಯ ಎಚ್ಚರಿಕೆ ಸಂಕೇತಗಳನ್ನು ಮುಂದುವರಿಸುವಂತೆ ಸೂಚಿಸಲಾಗಿದೆ. 

ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಚಂಡಮಾರುತದ ಹಿನ್ನೆಲೆ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಈಗಾಗಲೇ ಸಮುದ್ರದಲ್ಲಿರುವ ಮೀನುಗಾರರು ಸುರಕ್ಷಿತವಾಗಿ ದಡಕ್ಕೆ ಮರಳುವಂತೆ ಸೂಚಿಸಲಾಗಿದೆ. ಕರಾವಳಿ ಭಾಗದ ಜನರು ಸಮುದ್ರ ತೀರಕ್ಕೆ ತೆರಳುವುದನ್ನು ತಪ್ಪಿಸಬೇಕು ಎಂದು ಸಲಹೆ ನೀಡಲಾಗಿದೆ.

Exit mobile version