ನವದೆಹಲಿ, ನ.10: ದೆಹಲಿಯ ಸಂಭವಿಸಿದ ಭೀಕರ ಸ್ಫೋಟ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ. ಸ್ಫೋಟದಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ಇನ್ನೂ 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. “ದೆಹಲಿ ಸ್ಫೋಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಹೃದಯಪೂರ್ವಕ ಸಂತಾಪಗಳು ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಕೆಂಪುಕೋಟೆ ಸಮೀಪದ ಸುಭಾಷ್ ಮಾರ್ಗ್ ಟ್ರಾಫಿಕ್ ಸಿಗ್ನಲ್ ಬಳಿ ನಿಂತಿದ್ದ ಹುಂಡೈ ಐ20 ಕಾರಿನಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಸುತ್ತಮುತ್ತಲಿನ ಕಾರುಗಳು, ಬೈಕ್‌ಗಳು ಬೆಂಕಿಗಾಹುತಿಯಾಗಿದೆ.
ಈ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ. ದೆಹಲಿ ಸ್ಫೋಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಹೃದಯಪೂರ್ವಕ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ. ಸಂತ್ರಸ್ತರಿಗೆ ಎಲ್ಲಾ ರೀತಿಯ ಸಹಾಯ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ,” ಎಂದು ಮೋದಿ ತಿಳಿಸಿದ್ದಾರೆ. ಮೋದಿ ಅವರು ಈ ಘಟನೆಯ ಕುರಿತು ಗೃಹ ಸಚಿವ ಅಮಿತ್ ಶಾ ಹಾಗೂ ಉನ್ನತ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
Condolences to those who have lost their loved ones in the blast in Delhi earlier this evening. May the injured recover at the earliest. Those affected are being assisted by authorities. Reviewed the situation with Home Minister Amit Shah Ji and other officials.@AmitShah
— Narendra Modi (@narendramodi) November 10, 2025
ಅಮಿತ್ ಶಾ ಸ್ಥಳ ಪರಿಶೀಲನೆ, ಆಸ್ಪತ್ರೆಗೆ ಭೇಟಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಫೋಟ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಅವರು ಲೋಕನಾಯಕ ಜಯಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯಲ್ಲಿಯೇ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂದಿನ ಕ್ರಮದ ಕುರಿತು ಚರ್ಚಿಸಿದರು.
“ನಾನು ದೆಹಲಿ ಪೊಲೀಸ್ ಆಯುಕ್ತ ಹಾಗೂ ವಿಶೇಷ ಶಾಖೆಯ ಅಧಿಕಾರಿಗಳೊಂದಿಗೆ ನೇರವಾಗಿ ಮಾತನಾಡಿದ್ದೇನೆ. ಎಲ್ಲ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಎನ್‌ಐಎ, ಎಫ್‌ಎಸ್‌ಎಲ್ ಹಾಗೂ ಎನ್‌ಎಸ್‌ಜಿ ತಂಡಗಳು ಸ್ಥಳದಲ್ಲಿ ತನಿಖೆ ಪ್ರಾರಂಭಿಸಿವೆ,” ಎಂದು ಅಮಿತ್ ಶಾ ಹೇಳಿದ್ದಾರೆ.
ಎನ್‌ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ಮತ್ತು ಎನ್‌ಎಸ್‌ಜಿ (ನ್ಯಾಷನಲ್ ಸೆಕ್ಯುರಿಟಿ ಗಾರ್ಡ್) ತಂಡಗಳು ಈಗ ಸಂಪೂರ್ಣ ತನಿಖೆಯನ್ನು ಕೈಗೆತ್ತಿಕೊಂಡಿವೆ. ಪೊಲೀಸರು ಪಾದಚಾರಿಗಳು ಮತ್ತು ಸ್ಥಳೀಯ ವ್ಯಾಪಾರಿಗಳಿಂದ ಮಾಹಿತಿ ಸಂಗ್ರಹಿಸುತ್ತಿದ್ದು, ವಾಹನದ ಮಾಲೀಕರ ಗುರುತು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ. ದೆಹಲಿಯಾದ್ಯಂತ ಭದ್ರತಾ ವ್ಯವಸ್ಥೆಯನ್ನು ಕಠಿಣಗೊಳಿಸಲಾಗಿದ್ದು, ಪ್ರಮುಖ ಸರ್ಕಾರಿ ಕಟ್ಟಡಗಳು, ಮಾರುಕಟ್ಟೆಗಳು ಹಾಗೂ ಮೆಟ್ರೋ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.





