ರಾಷ್ಟ್ರ ರಾಜಧಾನಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿ ಒಕ್ಕೂಟ ಆಯೋಜಿಸಿರುವ ‘ವೋಟ್ ಬಚಾವೋ, ದೇಶ್ ಬಚಾವೋ’ ಬೃಹತ್ ರ್ಯಾಲಿಗೆ ಸಕಲ ಸಿದ್ಧತೆಗಳು ನಡೆದಿವೆ. ಈ ರ್ಯಾಲಿಯ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದಾರೆ. ಲಕ್ಷಾಂತರ ಜನರು ಹಾಗೂ ವಿಪಕ್ಷಗಳ ಪ್ರಮುಖ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿರುವುದರಿಂದ ಮೈದಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪ, ಮತಗಳ್ಳತನ ಹಾಗೂ ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಇಂಡಿ ಒಕ್ಕೂಟ ಈ ಪ್ರತಿಭಟನಾ ರ್ಯಾಲಿಯನ್ನು ಆಯೋಜಿಸಿದೆ. ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಪ್ರಶ್ನಿಸಿರುವ ವಿಪಕ್ಷಗಳು, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕುಗಳ ರಕ್ಷಣೆಗಾಗಿ ಹೋರಾಟ ನಡೆಸುವುದಾಗಿ ತಿಳಿಸಿವೆ.
ರ್ಯಾಲಿಯಲ್ಲಿ ಇಂಡಿ ಒಕ್ಕೂಟದ ವಿವಿಧ ಪಕ್ಷಗಳ ಪ್ರಮುಖ ನಾಯಕರು, ಕಾರ್ಯಕರ್ತರು ಹಾಗೂ ಲಕ್ಷಾಂತರ ಬೆಂಬಲಿಗರು ಭಾಗವಹಿಸುವ ಸಾಧ್ಯತೆಯಿದೆ. ಮೈದಾನದಲ್ಲಿ ವಾಹನ ನಿಲುಗಡೆಗೆ ಮೀಸಲಿಟ್ಟ ಸ್ಥಳವನ್ನೂ ಸೇರಿಸಿ ಸುಮಾರು 1 ಲಕ್ಷದಿಂದ 1.5 ಲಕ್ಷ ಜನರು ಸೇರುವ ಸಾಮರ್ಥ್ಯವಿದೆ ಎಂದು ಅಂದಾಜಿಸಲಾಗಿದೆ. ಆದರೆ, ಆಯೋಜಕರು ಲಕ್ಷಾಂತರ ಜನರು ಆಗಮಿಸಲಿದ್ದಾರೆ ಎಂದು ಹೇಳಿರುವ ಹಿನ್ನೆಲೆಯಲ್ಲಿ ಜನಸಂದಣಿ ನಿಯಂತ್ರಣಕ್ಕೆ ಪೊಲೀಸರು ವಿಶೇಷ ವ್ಯವಸ್ಥೆ ಮಾಡಿದ್ದಾರೆ.
ಕಾರ್ಯಕ್ರಮಕ್ಕಾಗಿ ರಾಮಲೀಲಾ ಮೈದಾನದಲ್ಲಿ ಎರಡು ವೇದಿಕೆಗಳನ್ನು ನಿರ್ಮಿಸಲಾಗಿದೆ. ಮುಖ್ಯ ವೇದಿಕೆಯಲ್ಲಿ ವಿಪಕ್ಷಗಳ ಹಿರಿಯ ನಾಯಕರು ಭಾಷಣ ಮಾಡಲಿದ್ದು, ಎರಡನೇ ವೇದಿಕೆಯನ್ನು ಇತರ ಮುಖಂಡರಿಗಾಗಿ ಸಿದ್ಧಪಡಿಸಲಾಗಿದೆ. ವಿಐಪಿ ನಾಯಕರ ಪ್ರವೇಶಕ್ಕೆ ಮೊದಲ ಗೇಟ್ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರಿಗಾಗಿ ಹೆಚ್ಚುವರಿಯಾಗಿ ಐದು ಪ್ರವೇಶ ದ್ವಾರಗಳನ್ನು ತೆರೆಯಲಾಗಿದೆ.
ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೈದಾನದಾದ್ಯಂತ ಸುಮಾರು 200 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕಾರ್ಯಕ್ರಮದ ಪ್ರತಿಯೊಂದು ಚಟುವಟಿಕೆಯ ಮೇಲೂ ನಿಗಾ ಇಡಲು ಮೈದಾನದ ಒಳಭಾಗದಲ್ಲಿ ಪ್ರತ್ಯೇಕ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ. ಇದರ ಮೂಲಕ ಜನರ ಚಲನವಲನ, ಪ್ರವೇಶ ಮತ್ತು ನಿರ್ಗಮನ ದ್ವಾರಗಳು ಸೇರಿದಂತೆ ಸೂಕ್ಷ್ಮ ಪ್ರದೇಶಗಳ ಮೇಲೆ ನಿರಂತರ ನಿಗಾ ಇರಿಸಲಾಗುತ್ತದೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ದೆಹಲಿ ಪೊಲೀಸರ ಸೆಂಟ್ರಲ್ ಡಿಸ್ಟ್ರಿಕ್ಟ್ ವಿಭಾಗ ಸೇರಿದಂತೆ ವಿವಿಧ ಜಿಲ್ಲಾ ಘಟಕಗಳ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಇವರೊಂದಿಗೆ ಅರೆಸೇನಾ ಪಡೆಗಳೂ ಭದ್ರತಾ ಕಾರ್ಯದಲ್ಲಿ ತೊಡಗಲಿವೆ. ರ್ಯಾಲಿ ನಡೆಯುವ ಮೈದಾನ ಮಾತ್ರವಲ್ಲದೆ ಸುತ್ತಮುತ್ತಲಿನ ರಸ್ತೆ ಹಾಗೂ ಪ್ರಮುಖ ಸ್ಥಳಗಳಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದೆ.
ಇನ್ನು, ರ್ಯಾಲಿಗೂ ಮುನ್ನ ಹಿರಿಯ ಪೊಲೀಸ್ ಅಧಿಕಾರಿಗಳು ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಖರ್ಗೆ ನಿವಾಸದಲ್ಲಿ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.





