ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ಸಂಜೆ ಸಂಭವಿಸಿದ ಪ್ರಬಲ ಕಾರು ಸ್ಫೋಟವು ನಗರವನ್ನು ಬೆಚ್ಚಿ ಬೀಳಿಸಿದೆ. ಈ ದುರಂತದಲ್ಲಿ ಕನಿಷ್ಠ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಫೋಟದ ತೀವ್ರತೆಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕಾರಿಗಳು ಇಂದಿನಿಂದ ಮೂರು ದಿನಗಳ ಕಾಲ ಕೆಂಪುಕೋಟೆಗೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣ ನಿರ್ಬಂಧಿಸಿದ್ದಾರೆ. ನವೆಂಬರ್ 13ರವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ.
ದೆಹಲಿಯ ಕೆಂಪುಕೋಟೆಯ ಮುಂಭಾಗದ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಕಾರೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಕಾರು ಸ್ಫೋಟಗೊಂಡು, ಸುತ್ತಲಿನ ವಾಹನಗಳು ಮತ್ತು ಕಟ್ಟಡಗಳಿಗೆ ಗಂಭೀರ ಹಾನಿಯಾಗಿದೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ದೆಹಲಿ ಪೊಲೀಸರು, ಅಗ್ನಿಶಾಮಕ ದಳ ಮತ್ತು ತುರ್ತು ವೈದ್ಯಕೀಯ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸಿದವು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲಾಯಿತು. ಮೃತದೇಹಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ.
ಈ ಘಟನೆಯ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಕೇಂದ್ರ ಸರ್ಕಾರ ಕಟ್ಟೆಚ್ಚರ ವಹಿಸಿದ್ದಾರೆ. ಕೆಂಪುಕೋಟೆಯ ಸುತ್ತಲೂ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಡ್ರೋನ್‌ಗಳ ಮೂಲಕ ನಿಗಾ ವಹಿಸಲಾಗುತ್ತಿದೆ. ಕೆಂಪುಕೋಟೆ ಭಾರತದ ಪ್ರಮುಖ ಪ್ರವಾಸಿ ತಾಣವಾಗಿದ್ದು, ಪ್ರತಿದಿನ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಈ ನಿರ್ಬಂಧದಿಂದ ಪ್ರವಾಸೋದ್ಯಮಕ್ಕೆ ತಾತ್ಕಾಲಿಕ ತೊಂದರೆಯಾಗಲಿದೆ.
ತನಿಖೆಯ ಜವಾಬ್ದಾರಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಫೊರೆನ್ಸಿಕ್ ಲ್ಯಾಬ್ (FLS) ತಂಡಗಳು ವಹಿಸಿಕೊಂಡಿವೆ. ಸ್ಫೋಟ ಸ್ಥಳದಲ್ಲಿ ಪರಿಶೀಲನೆ ನಡೆಯುತ್ತಿದೆ. CCTV ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದ್ದು, ಶಂಕಿತರನ್ನು ಹುಡುಕುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಸ್ಫೋಟ ಭಯೋತ್ಪಾದನಾ ದಾಳಿಯೇ ಎಂಬ ಅನುಮಾನ ವ್ಯಕ್ತವಾಗಿದ್ದು, ಉಗ್ರ ಸಂಘಟನೆಗಳ ಕೈವಾಡ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿ, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ. ಸ್ಫೋಟದಿಂದ ಅನೇಕ ಅಂಗಡಿಗಳು ಹಾನಿಗೊಳಗಾಗಿದ್ದು, ರಸ್ತೆಗಳಲ್ಲಿ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಪೊಲೀಸರು ಸಾರ್ವಜನಿಕರಿಗೆ ಆತಂಕ ಬೇಡ, ಎಲ್ಲವೂ ನಿಯಂತ್ರಣದಲ್ಲಿದೆ ಎಂದು ಭರವಸೆ ನೀಡಿದ್ದಾರೆ.





