ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಇಂದು ಸಂಜೆ ಭಯಾನಕ ಸ್ಫೋಟ ಸಂಭವಿಸಿದ್ದು, ಈ ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿವೆ. ಕೆಂಪುಕೋಟೆ ಮತ್ತು ಚಾಂದಿನಿ ಚೌಕ್ ಮೆಟ್ರೋ ನಿಲ್ದಾಣದ ಬಳಿ ಪಾರ್ಕ್ ಮಾಡಲಾಗಿದ್ದ ಕಾರೊಂದು ಭಾರೀ ಸ್ಫೋಟಗೊಂಡಿದ್ದು, ಇದರ ರಭಸಕ್ಕೆ ಸುತ್ತಮುತ್ತಲಿನ ವಾಹನಗಳು ಭಸ್ಮವಾಗಿವೆ.
ಸ್ಫೋಟದ ತೀವ್ರತೆಗೆ ಎರಡು ಕಾರುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಇತರ ಮೂರು ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ತಕ್ಷಣವೇ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ.
ಸಂಜೆ 6:55ರ ಸುಮಾರಿಗೆ ಸಂಭವಿಸಿದ ಈ ಸ್ಫೋಟವು ದೆಹಲಿಯ ಜನನಿಬಿಡ ಪ್ರದೇಶದಲ್ಲಿ ನಡೆದಿರುವುದರಿಂದ ಭಾರೀ ಅನಾಹುತಕ್ಕೆ ಕಾರಣವಾಗಿದೆ. ಮೆಟ್ರೋ ನಿಲ್ದಾಣದ ಪಕ್ಕದಲ್ಲೇ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಎರಡು ಮೃತದೇಹಗಳು ಪತ್ತೆಯಾಗಿದ್ದು, ಅವರು ಬೀದಿ ಬದಿಯ ವ್ಯಾಪಾರಿಗಳಾಗಿರಬಹುದು ಎಂದು ಶಂಕಿಸಲಾಗಿದೆ. ಕೆಂಪುಕೋಟೆ ಬಳಿ ವ್ಯಾಪಾರ ಮಾಡುತ್ತಿದ್ದ ಹಲವರು ಈ ಘಟನೆಯಲ್ಲಿ ಸಿಲುಕಿಕೊಂಡಿರಬಹುದು. ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಸ್ಫೋಟದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಕಾರಿನಲ್ಲಿ ಸ್ಫೋಟಕಗಳನ್ನು ಇರಿಸಿ ಬ್ಲಾಸ್ಟ್ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಕೇಂದ್ರ ಭದ್ರತಾ ಪಡೆಗಳು ಈ ಘಟನೆಯಿಂದ ಅಲರ್ಟ್ ಆಗಿದ್ದು, ದೆಹಲಿಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಸ್ಥಳಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಂಡ ಧಾವಿಸಿದ್ದು, ತನಿಖೆ ಆರಂಭಿಸಿದೆ.
