ನವದೆಹಲಿ: ದೇಶಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದ ನೀಟ್ (NEET-UG) ಪರೀಕ್ಷೆ ಅಕ್ರಮ ಪ್ರಕರಣದ ಬೆಳವಣಿಗೆಗೆ ಮಹತ್ವದ ತಿರುವು ಸಿಕ್ಕಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ಹಲವು ದಿನಗಳಿಂದ ಪರೀಕ್ಷಾ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆ ಕುರಿತು ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದ ಹಿನ್ನೆಲೆ ಈ ಬೆಳವಣಿಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಪ್ರಧಾನ್ ಅವರ ರಾಜೀನಾಮೆ ಬಳಿಕ, ಕಳೆದ ಕೆಲವು ದಿನಗಳಿಂದ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. “ನಾವು ಗೆದ್ದಿದ್ದೇವೆ” ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು, ವಿದ್ಯಾರ್ಥಿಗಳ ಹೋರಾಟಕ್ಕೆ ನ್ಯಾಯ ದೊರೆತಿದೆ ಎಂದು ಅಭಿಪ್ರಾಯಪಟ್ಟರು. ಸಾಮಾಜಿಕ ಜಾಲತಾಣಗಳಲ್ಲಿ ಈ ಸಂಭ್ರಮಾಚರಣೆಯ ವಿಡಿಯೊಗಳು ಕೂಡ ವ್ಯಾಪಕವಾಗಿ ವೈರಲ್ ಆಗಿವೆ.
ಇದೇ ವೇಳೆ, ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಅಧಿಕೃತ ‘X’ ಖಾತೆಯಲ್ಲಿ ರಾಜೀನಾಮೆ ಕುರಿತು ಸುದೀರ್ಘ ಪತ್ರವನ್ನು ಪ್ರಕಟಿಸಿದ್ದಾರೆ. ಈ ನಿರ್ಧಾರವು ಯಾವುದೇ ವೈಯಕ್ತಿಕ ಗೌರವದ ಪ್ರಶ್ನೆಯಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಕಳೆದ ನಾಲ್ಕು ದಶಕಗಳಿಂದ ವಿದ್ಯಾರ್ಥಿಗಳ ಹಿತಾಸಕ್ತಿ ಹಾಗೂ ದೇಶದ ಶಿಕ್ಷಣ ವ್ಯವಸ್ಥೆಯ ಅಭಿವೃದ್ಧಿಗಾಗಿ ಕೆಲಸ ಮಾಡಿರುವುದಾಗಿ ತಿಳಿಸಿದ್ದಾರೆ.
“ಸಶಕ್ತ ಭಾರತದ ನಿರ್ಮಾಣಕ್ಕೆ ಗುಣಮಟ್ಟದ ಶಿಕ್ಷಣವೇ ಅಡಿಪಾಯ. ದೇಶದ ಯುವಜನರ ಕನಸುಗಳನ್ನು ನನಸಾಗಿಸುವುದು ನನ್ನ ಸಾರ್ವಜನಿಕ ಜೀವನದ ಪ್ರಮುಖ ಗುರಿಯಾಗಿದೆ. ಈ ಜವಾಬ್ದಾರಿಯನ್ನು ನೀಡಿದ ಪ್ರಧಾನಮಂತ್ರಿಯವರಿಗೆ ನಾನು ಕೃತಜ್ಞನಾಗಿದ್ದೇನೆ” ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮೇ 3ರಂದು ನಡೆದ ನೀಟ್ ಪರೀಕ್ಷೆಯಲ್ಲಿ ಲೋಪದೋಷಗಳು ಬೆಳಕಿಗೆ ಬಂದ ಕೂಡಲೇ ಕೇಂದ್ರ ಸರ್ಕಾರ ತನಿಖೆಯನ್ನು ಸಿಬಿಐಗೆ ವಹಿಸಿತ್ತು ಎಂದು ಪ್ರಧಾನ್ ಹೇಳಿದ್ದಾರೆ. ಅಲ್ಲದೆ, ಮೊದಲ ಪರೀಕ್ಷೆಯನ್ನು ರದ್ದುಪಡಿಸಿ ಹೊಸ ದಿನಾಂಕದಲ್ಲಿ ಮರು ಪರೀಕ್ಷೆ ನಡೆಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು ಸಂಪೂರ್ಣ ಕಂಪ್ಯೂಟರ್ ಆಧಾರಿತ (CBT) ಮಾದರಿಯಲ್ಲಿ ನಡೆಸುವ ಯೋಜನೆ ರೂಪಿಸಲಾಗಿದೆ ಎಂದೂ ತಿಳಿಸಿದ್ದಾರೆ.
ಸುಮಾರು 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೇಂದ್ರ, ರಾಜ್ಯ ಹಾಗೂ ಸ್ಥಳೀಯ ಆಡಳಿತಗಳ ಸಹಯೋಗದೊಂದಿಗೆ ಜೂನ್ 21ರಂದು ಮರು ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಬಳಿಕ ಜುಲೈ 16ರಂದು ಪ್ರಕಟವಾದ ಫಲಿತಾಂಶದಲ್ಲಿ ಅನೇಕ ಸಾಮಾನ್ಯ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.
VIDEO | Delhi: As Union Education Minister Dharmendra Pradhan posts a letter, saying he has sent his resignation to PM Modi, CJP founder Abhijeet Dipke says, “We have done it. Dharmendra Pradhan has resigned.”
(Full video available on PTI Videos – https://t.co/n147TvrpG7) pic.twitter.com/M7XmkgYhRG
— Press Trust of India (@PTI_News) July 25, 2026
ವಿವಾದ ಆರಂಭವಾದ ದಿನದಿಂದಲೇ ತಾವು ಸಂಪೂರ್ಣ ಹೊಣೆಗಾರಿಕೆಯನ್ನು ಹೊತ್ತು ಕೆಲಸ ಮಾಡಿದ್ದಾಗಿ ತಿಳಿಸಿರುವ ಪ್ರಧಾನ್, ಯಾವುದೇ ಹಂತದಲ್ಲೂ ಜವಾಬ್ದಾರಿಯಿಂದ ಹಿಂದೆ ಸರಿಯಲಿಲ್ಲ ಎಂದು ಹೇಳಿದ್ದಾರೆ. ಪರೀಕ್ಷಾ ಮಾಫಿಯಾಗಳಿಂದ ಯಾವುದೇ ಪ್ರಾಮಾಣಿಕ ವಿದ್ಯಾರ್ಥಿಯ ಭವಿಷ್ಯ ಹಾಳಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಆದರೆ, ಈ ಸೂಕ್ಷ್ಮ ವಿಚಾರದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಕೆಲವರು ವಿದ್ಯಾರ್ಥಿಗಳನ್ನು ದಿಕ್ಕು ತಪ್ಪಿಸಲು ಹಾಗೂ ವ್ಯವಸ್ಥೆಯ ಮೇಲಿನ ನಂಬಿಕೆಗೆ ಧಕ್ಕೆಯುಂಟು ಮಾಡುವ ರೀತಿಯಲ್ಲಿ ನಡೆದುಕೊಂಡಿರುವುದು ಬೇಸರ ತಂದಿದೆ ಎಂದು ಅವರು ಹೇಳಿದ್ದಾರೆ.
ದೆಹಲಿಯ ಜಂತರ್ ಮಂತರ್ ಸೇರಿದಂತೆ ವಿವಿಧೆಡೆ ನಡೆಯುತ್ತಿರುವ ಪ್ರತಿಭಟನೆಗಳನ್ನು ಕೆಲವು ದೇಶವಿರೋಧಿ ಶಕ್ತಿಗಳು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವ ಸಾಧ್ಯತೆ ಇದೆ ಎಂಬ ಆತಂಕವನ್ನೂ ಅವರು ವ್ಯಕ್ತಪಡಿಸಿದ್ದಾರೆ. ದೇಶದ ಐಕ್ಯತೆ ಹಾಗೂ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಅನಗತ್ಯ ಗೊಂದಲ ಉಂಟಾಗದಂತೆ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ರಾಜೀನಾಮೆ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳ ಸಹಕಾರಕ್ಕೆ ಧನ್ಯವಾದ ಸಲ್ಲಿಸಿರುವ ಪ್ರಧಾನ್, ಮುಂದಿನ ದಿನಗಳಲ್ಲಿಯೂ ದೇಶದ ಯುವಜನತೆ ಹಾಗೂ ಒಡಿಶಾದ ಜನರ ಸೇವೆಗೆ ತಾವು ಬದ್ಧರಾಗಿರುವುದಾಗಿ ಹೇಳಿದ್ದಾರೆ.
