ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 4 ಮಹಿಳೆಯರ ಸಾವು

Untitled design 2025 06 16t175959.050

ಲಕ್ನೋ: ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ರಾಜಬ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅತ್ರಾಸಿ ಗ್ರಾಮದಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಭಯಾನಕ ಸ್ಫೋಟ ಸಂಭವಿಸಿದ್ದು, ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ 9 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಒಬ್ಬರು ಪುರುಷ, ಉಳಿದವರು ಮಹಿಳೆಯರಾಗಿದ್ದಾರೆ. ಎಲ್ಲ ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಯ ಬಗ್ಗೆ ಇನ್ನೂ ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ. ಪಟಾಕಿಗಳಿಗೆ ಬೆಂಕಿ ತಗುಲಿದ್ದರಿಂದ ಈ ಭೀಕರ ಸ್ಫೋಟ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಪಟಾಕಿಗಳು ಸಿಡಿದ ಕಾರಣ 300 ಮೀಟರ್ ದೂರದವರೆಗೆ ತುಣುಕುಗಳು ಹಾರಿಹೋಗಿವೆ. ಈ ದೃಶ್ಯವನ್ನು ಕಂಡ ಸ್ಥಳೀಯರು ಭಯಗೊಂಡು ಓಡಿಹೋಗಿದ್ದಾರೆ. ಸ್ಥಳೀಯರು ತಕ್ಷಣವೇ ಪೊಲೀಸ್ ಇಲಾಖೆಗೆ ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ಆರಂಭಿಸಿದರು. ನಾಲ್ವರು ಮಹಿಳೆಯರ ಮೃತದೇಹಗಳನ್ನು ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಗಾಯಗೊಂಡ 9 ಜನರನ್ನು ರಕ್ಷಣೆ ಮಾಡಿ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಲಾಗಿದೆ.

ಈ ಘಟನೆಯ ಬಗ್ಗೆ ಜಿಲ್ಲಾಧಿಕಾರಿಗಳು ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಅವರು ಘಟನೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಗತ್ಯ ಸೂಚನೆಗಳನ್ನು ಸಂಬಂಧಿತ ಅಧಿಕಾರಿಗಳಿಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Exit mobile version