ನವದೆಹಲಿ, ಜುಲೈ (24): ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ವಿಶೇಷ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆಯಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪೇಪರ್ ಲೀಕ್ ಪ್ರಕರಣಗಳ ಶೀಘ್ರ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ ಕೆಲವೇ ಗಂಟೆಗಳಲ್ಲೇ ದೆಹಲಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ದೆಹಲಿಯ ರೌಸ್ ಅವೆನ್ಯೂ ಕೋರ್ಟ್ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸಲಿರುವ ಈ ವಿಶೇಷ ನ್ಯಾಯಾಲಯವು ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ ಅಡಿಯಲ್ಲಿ ದಾಖಲಾಗುವ ಪ್ರಕರಣಗಳ ವಿಚಾರಣೆಯನ್ನು ಮಾತ್ರ ನಡೆಸಲಿದೆ. ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ವಂಚನೆ ಹಾಗೂ ಸಂಘಟಿತ ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸಿ ತೀರ್ಪು ನೀಡುವುದು ಈ ನ್ಯಾಯಾಲಯದ ಪ್ರಮುಖ ಉದ್ದೇಶವಾಗಿದೆ.
ದೆಹಲಿ ಹೈಕೋರ್ಟ್ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ನ್ಯಾಯಾಧೀಶೆ ಅನು ಗ್ರೋವರ್ ಬಳಿಗಾ ಅವರ ನ್ಯಾಯಾಲಯವನ್ನು ವಿಶೇಷ ಫಾಸ್ಟ್ ಟ್ರ್ಯಾಕ್ ಕೋರ್ಟ್ ಆಗಿ ನೇಮಕ ಮಾಡಲಾಗಿದೆ. ಈ ನ್ಯಾಯಾಲಯವು ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಡೆ ಕಾಯ್ದೆಯಡಿ ದಾಖಲಾಗುವ ಎಲ್ಲ ಪ್ರಕರಣಗಳ ವಿಚಾರಣೆಗೆ ವಿಶೇಷ ಅಧಿಕಾರ ಹೊಂದಿರಲಿದೆ.
ಇತ್ತೀಚಿನ NEET UG 2026 ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು ಹಾಗೂ ದೇಶಾದ್ಯಂತ ನಡೆದ ಪ್ರತಿಭಟನೆಗಳ ಹಿನ್ನೆಲೆ ಈ ಕ್ರಮಕ್ಕೆ ಹೆಚ್ಚಿನ ಮಹತ್ವ ಸಿಕ್ಕಿದೆ. ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆ ಹಾಗೂ ಪಾರದರ್ಶಕತೆಯನ್ನು ಕಾಪಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ X ನಲ್ಲಿ ಪ್ರತಿಕ್ರಿಯಿಸಿ, ಯುವಜನರ ಭವಿಷ್ಯ ಸರ್ಕಾರದ ಮೊದಲ ಆದ್ಯತೆ ಎಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ತ್ವರಿತ ಹಾಗೂ ಕಠಿಣ ಶಿಕ್ಷೆಯನ್ನು ಖಚಿತಪಡಿಸಲು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮಾಹಿತಿಯ ಪ್ರಕಾರ, ಹೊಸ ಕಾಯ್ದೆಯಡಿ ಈಗಾಗಲೇ ನಾಲ್ಕು ಪ್ರಕರಣಗಳು ದಾಖಲಾಗಿವೆ. ದೆಹಲಿಯ ಮಾದರಿಯಲ್ಲೇ ಮುಂಬೈ, ಕಲ್ಕತ್ತಾ ಮತ್ತು ಮಧ್ಯಪ್ರದೇಶ ಸೇರಿದಂತೆ ಇತರ ರಾಜ್ಯಗಳಲ್ಲಿಯೂ ವಿಶೇಷ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವ ಸಾಧ್ಯತೆ ಇದೆ.
2024ರಲ್ಲಿ ಜಾರಿಗೆ ಬಂದ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆಯು ಪೇಪರ್ ಲೀಕ್, ಪರೀಕ್ಷಾ ವಂಚನೆ ಹಾಗೂ ಸಂಘಟಿತ ಅಕ್ರಮಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಜೈಲು ಶಿಕ್ಷೆ ಮತ್ತು ಭಾರಿ ದಂಡ ವಿಧಿಸಲು ಅವಕಾಶ ನೀಡುತ್ತದೆ. ಹೊಸ ವಿಶೇಷ ನ್ಯಾಯಾಲಯ ಸ್ಥಾಪನೆಯಿಂದ ಪ್ರಕರಣಗಳ ವಿಚಾರಣೆ ವೇಗಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.
