ಸಿಂಧೂ ಜಲ ಒಪ್ಪಂದದಲ್ಲಿ ಬದಲಾವಣೆ ಇಲ್ಲ; ಪಾಕಿಸ್ತಾನಕ್ಕೆ ತಿರುಗೇಟು ನೀಡಿದ ಭಾರತ

Untitled Design (34)

ನವದೆಹಲಿ: ಸಿಂಧೂ ಜಲ ಒಪ್ಪಂದದ (Indus Waters Treaty) ವಿಚಾರದಲ್ಲಿ ಭಾರತದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ. ಪಾಕಿಸ್ತಾನಕ್ಕೆ ಮತ್ತೊಮ್ಮೆ ಖಡಕ್ ಸಂದೇಶ ರವಾನಿಸಿರುವ ಭಾರತ, ಸಿಂಧೂ ಜಲ ಒಪ್ಪಂದದ ಕುರಿತು ಈಗಾಗಲೇ ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದು, ಅದಕ್ಕೆ ಬದ್ಧವಾಗಿದೆ ಎಂದು ಹೇಳಿದೆ. ಪಾಕಿಸ್ತಾನದ ಸಚಿವ ಮುಸಾದಿಕ್ ಮಲಿಕ್ ಭಾರತಕ್ಕೆ ಭೇಟಿ ನೀಡಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಹೇಳಿಕೆ ನೀಡಿರುವುದು ಮಹತ್ವ ಪಡೆದುಕೊಂಡಿದೆ.

ನವದೆಹಲಿಯಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ (SCO) ನಾಗರಿಕತೆಯ ಸಂವಾದ ವೇದಿಕೆಯಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನದ ಹವಾಮಾನ ಬದಲಾವಣೆ ಸಚಿವ ಮುಸಾದಿಕ್ ಮಲಿಕ್ ಭಾರತಕ್ಕೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರಿಗೆ ಸಿಂಧೂ ಜಲ ಒಪ್ಪಂದದ ಕುರಿತು ಪ್ರಶ್ನೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, ಒಪ್ಪಂದದ ವಿಚಾರದಲ್ಲಿ ಭಾರತದ ನಿಲುವು ಮೊದಲಿನಿಂದಲೂ ಸ್ಪಷ್ಟವಾಗಿದೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಖಡಕ್ ಆಗಿ ತಿಳಿಸಿದ್ದಾರೆ.

ಪಾಕಿಸ್ತಾನಕ್ಕೆ ಭಾರತದ ಸ್ಪಷ್ಟ ಸಂದೇಶ

ಪಾಕಿಸ್ತಾನದ ಸಚಿವ ಮುಸಾದಿಕ್ ಮಲಿಕ್ ಅವರು ಶುಕ್ರವಾರ ಮುಂಜಾನೆ ನವದೆಹಲಿಗೆ ಆಗಮಿಸಿದ್ದು, ಸಂಜೆ ನಡೆದ ಮೂರು ದಿನಗಳ ಎಸ್‌ಸಿಒ ನಾಗರಿಕತೆಯ ಸಂವಾದ ವೇದಿಕೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ದೆಹಲಿಯ ಐತಿಹಾಸಿಕ ಪುರಾಣ ಕಿಲ್ಲಾದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಮ್ಮೇಳನವನ್ನು ಉದ್ಘಾಟಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪಾಕಿಸ್ತಾನದ ಸಚಿವರು ಭಾಗವಹಿಸಿರುವ ಹಿನ್ನೆಲೆ ಉಭಯ ದೇಶಗಳ ನಡುವಿನ ಸಂಬಂಧ ಹಾಗೂ ಸಿಂಧೂ ಜಲ ಒಪ್ಪಂದದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಸಿಂಧೂ ಜಲ ಒಪ್ಪಂದದ ಕುರಿತು ಭಾರತದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುದನ್ನು ಪುನರುಚ್ಚರಿಸಿದ್ದಾರೆ.

ಆಪರೇಷನ್ ಸಿಂಧೂರ್ ಬಳಿಕ ಮೊದಲ ಭೇಟಿ

2025ರಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿತ್ತು. ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಈ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನದ ವಿರುದ್ಧ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿತ್ತು.

ಇದೇ ಬೆಳವಣಿಗೆಗಳ ಭಾಗವಾಗಿ 2025ರಲ್ಲಿ ಭಾರತ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸುವ ನಿರ್ಧಾರ ಪ್ರಕಟಿಸಿತ್ತು. ಬಳಿಕ ಮೇ 7ರಿಂದ 10ರವರೆಗೆ ನಡೆದ ಆಪರೇಷನ್ ಸಿಂಧೂರ್ ಮತ್ತು ಮಿಲಿಟರಿ ಸಂಘರ್ಷ ಉಭಯ ರಾಷ್ಟ್ರಗಳ ನಡುವಿನ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿತ್ತು.

ಇಂತಹ ಬೆಳವಣಿಗೆಗಳ ನಂತರ ಭಾರತದಲ್ಲಿ ನಡೆಯುತ್ತಿರುವ ಅಧಿಕೃತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಪಾಕಿಸ್ತಾನದ ಸಚಿವರಿಗೆ ಆಹ್ವಾನ ನೀಡಿರುವುದು ರಾಜತಾಂತ್ರಿಕವಾಗಿ ಮಹತ್ವ ಪಡೆದುಕೊಂಡಿದೆ. ಎಸ್‌ಸಿಒ ಸದಸ್ಯ ರಾಷ್ಟ್ರಗಳೆಲ್ಲರಿಗೂ ಆಹ್ವಾನ ನೀಡುವ ಸಂಪ್ರದಾಯದಂತೆ ಪಾಕಿಸ್ತಾನಕ್ಕೂ ಆಹ್ವಾನ ನೀಡಲಾಗಿದೆ ಎಂದು ಭಾರತ ಈ ಹಿಂದೆಯೇ ಸ್ಪಷ್ಟಪಡಿಸಿತ್ತು.

ಸಂಸ್ಕೃತಿಯಿಂದ ಸಂಬಂಧ ಸುಧಾರಣೆಯಾಗುತ್ತಾ?

ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನದ ಸಚಿವ ಮುಸಾದಿಕ್ ಮಲಿಕ್ ಅವರು ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಸುಧಾರಣೆಯಲ್ಲಿ ಸಂಸ್ಕೃತಿಯ ಪಾತ್ರದ ಕುರಿತು ಮಾತನಾಡಿದ್ದಾರೆ. ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಮತ್ತು ಪಾಕಿಸ್ತಾನದ ನಡುವೆ ಉತ್ತಮ ಬಾಂಧವ್ಯ ಬೆಸೆಯುವಲ್ಲಿ ಸಂಸ್ಕೃತಿಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದರಿಂದಾಗಿ ಎಸ್‌ಸಿಒ ವೇದಿಕೆಯ ಮೂಲಕ ಎರಡೂ ದೇಶಗಳ ನಡುವೆ ಸಾಂಸ್ಕೃತಿಕ ಸಂವಾದಕ್ಕೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯೂ ವ್ಯಕ್ತವಾಗಿದೆ. ಆದರೆ, ಸಿಂಧೂ ಜಲ ಒಪ್ಪಂದದ ವಿಚಾರದಲ್ಲಿ ಭಾರತದ ನಿಲುವು ಬದಲಾಗಿಲ್ಲ ಎಂಬ ಸ್ಪಷ್ಟ ಸಂದೇಶವು ರಾಜತಾಂತ್ರಿಕ ವಲಯದಲ್ಲಿ ಗಮನ ಸೆಳೆದಿದೆ.

ಏನಿದು ಎಸ್‌ಸಿಒ ನಾಗರಿಕತೆಯ ಸಂವಾದ?

ನವೆಂಬರ್ 20ರಿಂದ 22ರವರೆಗೆ ನವದೆಹಲಿಯಲ್ಲಿ ನಡೆಯುತ್ತಿರುವ ಮೊದಲ ಎಸ್‌ಸಿಒ ನಾಗರಿಕತೆಯ ಸಂವಾದವನ್ನು ಕೇಂದ್ರ ಸಂಸ್ಕೃತಿ ಸಚಿವಾಲಯ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಜಂಟಿಯಾಗಿ ಆಯೋಜಿಸಿವೆ. ಎಸ್‌ಸಿಒ ಸದಸ್ಯ ರಾಷ್ಟ್ರಗಳ ನಡುವಿನ ಸಾಂಸ್ಕೃತಿಕ ಸಂಬಂಧ, ನಾಗರಿಕತೆ ಮತ್ತು ಪರಸ್ಪರ ಸಹಕಾರವನ್ನು ಉತ್ತೇಜಿಸುವುದು ಈ ವೇದಿಕೆಯ ಪ್ರಮುಖ ಉದ್ದೇಶವಾಗಿದೆ.

2001ರಲ್ಲಿ ಶಾಂಘೈನಲ್ಲಿ ರಷ್ಯಾ, ಚೀನಾ, ಕಿರ್ಗಿಸ್ತಾನ್, ಕಜಕಿಸ್ತಾನ್, ತಜಿಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ದೇಶಗಳು ಸೇರಿ ಶಾಂಘೈ ಸಹಕಾರ ಸಂಘಟನೆಯನ್ನು ಸ್ಥಾಪಿಸಿದ್ದವು. 2017ರಲ್ಲಿ ಭಾರತ ಮತ್ತು ಪಾಕಿಸ್ತಾನ ಈ ಸಂಘಟನೆಯ ಪೂರ್ಣ ಪ್ರಮಾಣದ ಸದಸ್ಯ ರಾಷ್ಟ್ರಗಳಾಗಿ ಸೇರ್ಪಡೆಯಾದವು.

ಈ ಸಮ್ಮೇಳನಕ್ಕೆ ಪಾಕಿಸ್ತಾನ ಸೇರಿದಂತೆ ಎಲ್ಲಾ ಸದಸ್ಯ ರಾಷ್ಟ್ರಗಳು, ವೀಕ್ಷಕ ರಾಷ್ಟ್ರಗಳು ಹಾಗೂ ಸಂವಾದ ಪಾಲುದಾರ ರಾಷ್ಟ್ರಗಳಿಗೆ ಆಹ್ವಾನ ನೀಡಲಾಗಿದೆ ಎಂದು ಭಾರತ ಸ್ಪಷ್ಟಪಡಿಸಿದೆ.

Exit mobile version