ಜೋಧಪುರ್‌ನಲ್ಲಿ ಭೀಕರ ದುರಂತ: ಟೆಂಪೋ ಟ್ರಾವಲರ್ ಟ್ರಕ್‌ಗೆ ಡಿಕ್ಕಿ, 18 ಮಂದಿ ಸಾವು

Web (13)

ರಾಜಸ್ಥಾನದ ಜೋಧಪುರ್‌ನ ಫಲೋದಿಯ ಮಟೋಡ ಗ್ರಾಮದ ಸಮೀಪದ ಭಾರತ್ ಮಾಲಾ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವಲರ್ ವಾಹನವು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 18ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.

ಈ ದುರಂತದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು, ಗಾಯಾಳುಗಳಿಗೆ ತಕ್ಷಣವೇ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ.ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರೆಂದು ಹೇಳಲಾಗುತ್ತಿದೆ.

ಇವರು ಬಿಕಾನೆರ್‌ನ ಕೊಲಾಯತ್ ಮಂದಿರಕ್ಕೆ ಭೇಟಿ ನೀಡಿ ಜೋಧಪುರ್‌ಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಗ್ರೀನ್ ಕಾರಿಡಾರ್ ಮೂಲಕ ಜೋಧಪುರ್‌ನ ಆಸ್ಪತ್ರೆಗೆ ಸಾಗಿಸಲಾಯಿತು.

ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಈ ಘಟನೆಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಅಪಘಾತದ ಕಾರಣದ ಬಗ್ಗೆ ತನಿಖೆ ಆರಂಭವಾಗಿದ್ದು, ಸ್ಥಳೀಯ ಪೊಲೀಸರು ಘಟನೆಯ ಸಂಪೂರ್ಣ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.ಈ ದುರಂತವು ರಾಜಸ್ಥಾನದ ರಸ್ತೆ ಸುರಕ್ಷತೆಯ ಕುರಿತು ಮತ್ತೊಮ್ಮೆ ಗಂಭೀರ ಚರ್ಚೆಗೆ ಕಾರಣವಾಗಿದೆ.

Exit mobile version