ಕೇಂದ್ರ ಸರ್ಕಾರದ ಪಿಎಂ ಇ-ಡ್ರೈವ್ ಯೋಜನೆಯಡಿ ಕರ್ನಾಟಕ ಸರ್ಕಾರವು 10,000 ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡುವಂತೆ ಕೋರಿ, ಕೇಂದ್ರ ಬೃಹತ್ ಕೈಗಾರಿಕಾ ಸಚಿವಾಲಯಕ್ಕೆ ಶುಕ್ರವಾರ ಪ್ರಸ್ತಾವ ಸಲ್ಲಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸುವ ಅಗತ್ಯವನ್ನು ಒತ್ತಿ, ಕರ್ನಾಟಕದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಈ ಮನವಿಯನ್ನು ಸಲ್ಲಿಸಿದ್ದಾರೆ.
ಕೇಂದ್ರ ಸಚಿವ ಕುಮಾರಸ್ವಾಮಿ, ಕರ್ನಾಟಕಕ್ಕೆ ಹಂತಹಂತವಾಗಿ 4,500 ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡುವ ಭರವಸೆ ನೀಡಿದ್ದಾರೆ. “ವಿದ್ಯುತ್ ಚಾಲಿತ ಬಸ್‌ಗಳ ಹಂಚಿಕೆ ಪ್ರಕ್ರಿಯೆ ಈಗಾಗಲೇ ಪ್ರಗತಿಯಲ್ಲಿದೆ. ಕರ್ನಾಟಕಕ್ಕೆ ಆದ್ಯತೆಯ ಮೇರೆಗೆ ಬಸ್‌ಗಳನ್ನು ಹಂಚಿಕೆ ಮಾಡಲಾಗುವುದು” ಎಂದು ಅವರು ತಿಳಿಸಿದ್ದಾರೆ.
ಪಿಎಂ ಇ-ಡ್ರೈವ್ ಯೋಜನೆಯಡಿ ದೇಶದ 9 ಪ್ರಮುಖ ನಗರಗಳಿಗೆ 14,028 ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಚಾರ್ಜಿಂಗ್ ಸ್ಟೇಷನ್‌ಗಳು, ಬಸ್ ಡಿಪೋಗಳು, ಮತ್ತು ವಾಹನ ನಿರ್ವಹಣಾ ವ್ಯವಸ್ಥೆಯಂತಹ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಚರ್ಚೆ ನಡೆಸಿವೆ. ಈ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಸಚಿವಾಲಯದ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಪಿಎಂ ಇ-ಡ್ರೈವ್ ಉಪಕ್ರಮವು ನಗರಗಳಲ್ಲಿ ವಾಯುಮಾಲಿನ್ಯ ರಹಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಗುರಿಯನ್ನು ಹೊಂದಿದ್ದು, ಎರಡು ವರ್ಷಗಳಲ್ಲಿ ₹10,900 ಕೋಟಿ ವೆಚ್ಚದೊಂದಿಗೆ 14,028 ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸಲಾಗುವುದು.