ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಲ್‌ಡಿಎಫ್ (LDF) ಸರ್ಕಾರವನ್ನು ಜನ ತಿರಸ್ಕರಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಚುನಾವಣಾ ಫಲಿತಾಂಶಗಳು ಸ್ಪಷ್ಟವಾದ ತಕ್ಷಣವೇ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದರು.
ಕೇರಳ ವಿಧಾನಸಭೆಯ ಒಟ್ಟು 140 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಭರ್ಜರಿ ಮುನ್ನಡೆ ಸಾಧಿಸಿದ್ದು, ಸುಮಾರು 104 ಸ್ಥಾನಗಳಲ್ಲಿ ಗೆದ್ದಿದೆ. ಈ ಮೂಲಕ ಸ್ಪಷ್ಟ ಬಹುಮತವನ್ನು ಗಳಿಸಿರುವ ಯುಡಿಎಫ್, 10 ವರ್ಷಗಳ ಬಳಿಕ ಮತ್ತೆ ಅಧಿಕಾರಕ್ಕೇರುವ ಹಾದಿಯನ್ನು ಸುಗಮಗೊಳಿಸಿದೆ.
ಚುನಾವಣಾ ಫಲಿತಾಂಶ ಹೊರಬಿದ್ದ ತಕ್ಷಣವೇ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದರು. ರಾಜ್ಯಪಾಲ ರಾಜೇಂದ್ರ ಆರ್ಲೇಕರ್ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದು, ಹೊಸ ಸರ್ಕಾರ ಅಧಿಕಾರ ಸ್ವೀಕರಿಸುವವರೆಗೆ ಕಾರ್ಯ ನಿರ್ವಹಿಸುವ ಮುಖ್ಯಮಂತ್ರಿಯಾಗಿ ಮುಂದುವರಿಯಲು ವಿಜಯನ್ ಅವರಿಗೆ ಸೂಚಿಸಿದ್ದಾರೆ.
ಈ ಚುನಾವಣೆಯಲ್ಲಿ ಯುಡಿಎಫ್ ಮೈತ್ರಿಗೆ ಜನರಿಂದ ಭಾರೀ ಬೆಂಬಲ ವ್ಯಕ್ತವಾಗಿದೆ. 10 ವರ್ಷಗಳ ಕಾಲ ಆಡಳಿತ ನಡೆಸಿದ ಎಲ್‌ಡಿಎಫ್ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಸ್ಪಷ್ಟವಾಗಿ ಕಂಡುಬಂದಿದೆ. ಯುವಜನರಿಗೆ ಉದ್ಯೋಗಾವಕಾಶಗಳ ಕೊರತೆ, ಆರ್ಥಿಕ ಸಮಸ್ಯೆಗಳು ಹಾಗೂ ಆಡಳಿತದ ಮೇಲೆ ಮೂಡಿದ ಅಸಮಾಧಾನ ಮತದಾರರ ನಿರ್ಧಾರವನ್ನು ಪ್ರಭಾವಿಸಿದೆ.
ಈ ಬಾರಿ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಯುಡಿಎಫ್ ಅಭ್ಯರ್ಥಿಗಳು ಭರ್ಜರಿ ಜಯ ದಾಖಲಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ದಿವಂಗತ ಉಮ್ಮನ್ ಚಾಂಡಿ ಅವರ ಪುತ್ರ ಚಾಂಡಿ ಉಮ್ಮನ್ ಅವರು ಪುತುಪಳ್ಳಿ ಕ್ಷೇತ್ರದಲ್ಲಿ ಸುಮಾರು 52,907 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಇದೇ ರೀತಿ, ಹರಿಪಾಡ್ ಕ್ಷೇತ್ರದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಅವರು 23,000ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಮುಸ್ಲಿಂ ಲೀಗ್ ಪಕ್ಷವು ತನ್ನ ಸ್ಪರ್ಧಿಸಿದ 27 ಕ್ಷೇತ್ರಗಳಲ್ಲಿ 23ರಲ್ಲಿ ಮುನ್ನಡೆ ಸಾಧಿಸುವ ಮೂಲಕ ಯುಡಿಎಫ್ ಗೆಲುವಿಗೆ ಮಹತ್ವದ ಕೊಡುಗೆ ನೀಡಿದೆ.
