ಲಕ್ನೋ: ಉತ್ತರ ಪ್ರದೇಶದ ಲಕ್ನೋ-ಆಗ್ರಾ ಎಕ್ಸ್ಪ್ರೆಸ್ವೇನಲ್ಲಿ ಸೋಮವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸುಮಾರು 50ರಿಂದ 60 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕಂದಕಕ್ಕೆ ಉರುಳಿದೆ. ಈ ದುರ್ಘಟನೆಯಲ್ಲಿ ಮೂವರು ಪ್ರಯಾಣಿಕರು ಮೃತಪಟ್ಟಿದ್ದು, 45 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ರಕ್ಷಿಸಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಬೆಳಗ್ಗೆ ಸುಮಾರು 6ರಿಂದ 6.30ರ ನಡುವೆ ಎಕ್ಸ್ಪ್ರೆಸ್ವೇಯ ಮೊದಲ ಟೋಲ್ ಪ್ಲಾಜಾ ಸಮೀಪ ಈ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಬಸ್ ಏಕಾಏಕಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಉರುಳಿದೆ. ಬಸ್ ಪಲ್ಟಿಯಾದ ರಭಸಕ್ಕೆ ಪ್ರಯಾಣಿಕರು ಒಳಗೆ ಸಿಲುಕಿಕೊಂಡಿದ್ದರು.
ಸ್ಥಳಕ್ಕೆ ಧಾವಿಸಿದ ಪೊಲೀಸ್, SDRF ತಂಡ
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್ ಪಡೆ ಸ್ಥಳಕ್ಕೆ ಧಾವಿಸಿದೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ಹಾಗೂ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಕೂಡ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಬಸ್ನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರಗೆ ಕರೆತಂದು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ.
ಅಪಘಾತದಲ್ಲಿ ಗಾಯಗೊಂಡವರಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ತುರ್ತು ಚಿಕಿತ್ಸೆ ಒದಗಿಸಲು ಆರೋಗ್ಯ ಇಲಾಖೆ ಅಗತ್ಯ ವ್ಯವಸ್ಥೆ ಮಾಡಿದೆ. ರಕ್ಷಣಾ ಕಾರ್ಯಾಚರಣೆಯ ಬಳಿಕ ಅಪಘಾತಕ್ಕೀಡಾದ ಬಸ್ ಅನ್ನು ತೆರವುಗೊಳಿಸುವ ಕಾರ್ಯವೂ ನಡೆದಿದೆ.
ಮೂವರು ಪ್ರಯಾಣಿಕರು ಸಾವು
ಅಪಘಾತದಲ್ಲಿ ಗಾಯಗೊಂಡವರನ್ನು ಲಕ್ನೋದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಲೋಕ್ ಬಂಧು ಆಸ್ಪತ್ರೆಗೆ ಕರೆದೊಯ್ಯಲಾದವರ ಪೈಕಿ ಇಬ್ಬರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮತ್ತೊಬ್ಬ ಗಾಯಾಳು ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ (KGMU) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಗಾಯಾಳುಗಳ ಪೈಕಿ 31 ಮಂದಿಯನ್ನು ಲೋಕ್ ಬಂಧು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ 13 ಮಂದಿಗೆ ಕೆಜಿಎಂಯು ಟ್ರಾಮಾ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ಅಪಘಾತದಲ್ಲಿ ಒಟ್ಟು ಮೂವರು ಮೃತಪಟ್ಟಿದ್ದು, 45 ಮಂದಿ ಗಾಯಗೊಂಡಿದ್ದಾರೆ.
ಅಧಿಕಾರಿಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಸೂಚನೆ
ಅಪಘಾತದ ಬಗ್ಗೆ ಮಾಹಿತಿ ಪಡೆದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಚುರುಕುಗೊಳಿಸಬೇಕು ಎಂದು ಸೂಚಿಸಿದ್ದಾರೆ. ಗಾಯಾಳುಗಳಿಗೆ ಯಾವುದೇ ಕೊರತೆಯಾಗದಂತೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆಯೂ ನಿರ್ದೇಶನ ನೀಡಿದ್ದಾರೆ.
ಇನ್ನು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವ ಬ್ರಜೇಶ್ ಪಾಠಕ್ ಕೂಡ ಘಟನೆ ಕುರಿತು ಮಾಹಿತಿ ನೀಡಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಗಾಯಾಳುಗಳ ಕುಟುಂಬದವರಿಗೆ ಜಿಲ್ಲಾ ಆಡಳಿತದ ಮೂಲಕ ಮಾಹಿತಿ ತಲುಪಿಸುವ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಲಕ್ನೋ-ಆಗ್ರಾ ಎಕ್ಸ್ಪ್ರೆಸ್ವೇನಲ್ಲಿ ಪದೇಪದೇ ರಸ್ತೆ ಅಪಘಾತಗಳು ಸಂಭವಿಸುತ್ತಿರುವ ಬಗ್ಗೆ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಕಳವಳ ವ್ಯಕ್ತಪಡಿಸಿದ್ದಾರೆ. ಚಾಲಕರು ನಿದ್ರೆಯ ಮಂಪರಿನಲ್ಲಿ ವಾಹನ ಚಲಾಯಿಸುವುದು ಮತ್ತು ಅತಿವೇಗದ ಚಾಲನೆ ಅಪಘಾತಗಳಿಗೆ ಕಾರಣವಾಗುತ್ತಿರುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.
ಹೀಗಾಗಿ ಹೆದ್ದಾರಿಯ ವ್ಯಾಪ್ತಿಗೆ ಬರುವ ಜಿಲ್ಲಾಡಳಿತಗಳು ಹಾಗೂ ಉತ್ತರ ಪ್ರದೇಶ ಎಕ್ಸ್ಪ್ರೆಸ್ವೇ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರ (UPEIDA) ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದ್ದಾರೆ. ಕೇವಲ ದಂಡ ವಿಧಿಸುವುದಕ್ಕೆ ಸೀಮಿತವಾಗದೆ, ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಮುಖ್ಯ ಎಂದು ತಿಳಿಸಿದ್ದಾರೆ.
