ಉತ್ತರ ಪ್ರದೇಶ: ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇದರ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದಾರೆ. ಲಾರಿಯೊಂದು ಕಾರ್‌ಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾದ ಘಟನೆ ಬಲದೇವ್ ಪೊಲೀಸ್ ಠಾಣಾ ವ್ಯಾಪ್ತಿಯ ಸರೈ ಸಲ್ವಾನ್ ಗ್ರಾಮದ ಬಳಿ ನಡೆದಿದೆ. ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಸೇರಿದಂತೆ ಆರು ಜನರು ಮೃತಪಟ್ಟಿದ್ದು, ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹರ್ಲಾಲ್‌ಪುರದ ನಿವಾಸಿ ಧರ್ಮವೀರ್ ಸಿಂಗ್, ಅವರ ಇಬ್ಬರು ಪುತ್ರರಾದ ರೋಹಿತ್ ಮತ್ತು ಆರ್ಯನ್, ಹಾಗೂ ಮಹೋಬಾದ ಹುಸೈದ್ ಗ್ರಾಮದ ದಲ್ವೇರ್, ಅವರ ಸೋದರ ಪರಾಸ್ ಸಿಂಗ್ ತೋಮರ್ ಮತ್ತು ಮತ್ತೊಬ್ಬ ವ್ಯಕ್ತಿ ಈ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಧರ್ಮವೀರ್ ಅವರ ಪತ್ನಿ ಸೋನಿ ಮತ್ತು ಮಗಳು ಪಾಯಲ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಡಿಕ್ಕಿ ಹೊಡೆದ ವಾಹನದ ಪತ್ತೆಗಾಗಿ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ವರಿಷ್ಠಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಬಸ್ ಪಲ್ಟಿ: 25ಕ್ಕೂ ಅಧಿಕ ಗಾಯಾಳುಗಳು
ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದ ಬಳಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ವೀಕೆಂಡ್‌ಗಾಗಿ ಕುದುರೆಮುಖದ ನೇತ್ರಾವತಿ ಪೀಕ್‌ಗೆ ಟ್ರಕಿಂಗ್‌ಗೆ ತೆರಳುತ್ತಿದ್ದ ಬೆಂಗಳೂರಿನ ಎಂಎನ್‌ಸಿ ಉದ್ಯೋಗಿಗಳನ್ನು ಕೊಂಡೊಯ್ಯುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಸ್ಥಳೀಯರು ಗಾಯಾಳುಗಳನ್ನು ಚಿಕ್ಕಮಗಳೂರು ಮತ್ತು ಮೂಡಿಗೆರೆ ಜಿಲ್ಲಾ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಈ ಘಟನೆಯ ಬಗ್ಗೆ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.