ಬೆಂಗಳೂರು, ಮೇ 26: ಕಾವೇರಿ ನದಿಗೆ ಮೇಕೆದಾಟು ಅಣೆಕಟ್ಟು ನಿರ್ಮಾಣದ ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಗೆ ಅಡ್ಡಗಾಲು ಹಾಕಲು ಮುಂದಾಗಿದ್ದ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಸುಪ್ರೀಂ ಕೋರ್ಟ್ ದೊಡ್ಡ ಶಾಕ್ ನೀಡಿದೆ. ಕಳೆದ ವರ್ಷದ ತೀರ್ಪನ್ನು ಮರುಪರಿಶೀಲನೆಗೆ ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕರ್ನಾಟಕದ ದಾರಿ ಸುಗಮವಾಗುವ ಸಾಧ್ಯತೆ ಹೆಚ್ಚಿದೆ.
ಕರ್ನಾಟಕ ಸರ್ಕಾರವು ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮೇಕೆದಾಟು ಯೋಜನೆಯನ್ನು ರೂಪಿಸಿದೆ. ಆದರೆ ಆರಂಭದಿಂದಲೂ ತಮಿಳುನಾಡು ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಕಾವೇರಿ ನೀರಿನ ಹಂಚಿಕೆಗೆ ಧಕ್ಕೆಯಾಗಲಿದೆ ಎಂದು ವಾದಿಸುತ್ತ ಬಂದಿದೆ.
ಈ ಹಿನ್ನೆಲೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಕರ್ನಾಟಕದ ಯೋಜನೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಈಗಾಗಲೇ 2025ರ ನವೆಂಬರ್‌ನಲ್ಲಿ ವಜಾಗೊಳಿಸಿತ್ತು. ಬಳಿಕ ಆ ತೀರ್ಪನ್ನು ಮರುಪರಿಶೀಲನೆ ಮಾಡುವಂತೆ ತಮಿಳುನಾಡು ಸರ್ಕಾರ ಹೊಸ ಅರ್ಜಿ ಸಲ್ಲಿಸಿತ್ತು. ಆದರೆ ನ್ಯಾಯಪೀಠವು ಈ ಅರ್ಜಿಯನ್ನೂ ತಳ್ಳಿಹಾಕಿ, ಹಿಂದಿನ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ಈ ತೀರ್ಪು ಕರ್ನಾಟಕದ ಪರವಾಗಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗುತ್ತಿದೆ. ವಿಶೇಷವಾಗಿ ರಾಜ್ಯ ಸರ್ಕಾರ ಮೇಕೆದಾಟು ಯೋಜನೆಯನ್ನು ಶೀಘ್ರ ಜಾರಿಗೊಳಿಸುವ ನಿಟ್ಟಿನಲ್ಲಿ ಮುಂದಿನ ಕ್ರಮಗಳನ್ನು ಕೈಗೊಳ್ಳಲು ಇದು ನೆರವಾಗಲಿದೆ ಎನ್ನಲಾಗುತ್ತಿದೆ.
ಇದಕ್ಕೂ ಮುನ್ನ ಹಲವು ವರ್ಷಗಳಿಂದ ತಮಿಳುನಾಡಿನ ವಿವಿಧ ಸರ್ಕಾರಗಳು ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತ ಬಂದಿವೆ. ಇದೀಗ ತಮಿಳುನಾಡಿನ ನೂತನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಕೂಡ ಇದೇ ನಿಲುವು ಮುಂದುವರಿಸಿದ್ದಾರೆ. ಮೇಕೆದಾಟು ಯೋಜನೆ ಕುರಿತು ವಿಶೇಷ ಪರಿಶೀಲನಾ ಸಭೆ ನಡೆಸಿರುವ ಅವರು, ಯಾವುದೇ ಕಾರಣಕ್ಕೂ ಯೋಜನೆಗೆ ಒಪ್ಪಿಗೆ ನೀಡುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.
ಏನಿದು ಮೇಕೆದಾಟು ಯೋಜನೆ?
ಮೇಕೆದಾಟು ಯೋಜನೆ ಬೆಂಗಳೂರು ನಗರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ರೂಪುಗೊಂಡಿರುವ ಬಹುಮುಖ್ಯ ಯೋಜನೆಯಾಗಿದೆ. ಕಾವೇರಿ ನದಿಯ ಮೇಲೆ ರಾಮನಗರ ಜಿಲ್ಲೆಯ ಮೇಕೆದಾಟು ಬಳಿ ಜಲಾಶಯ ನಿರ್ಮಿಸಿ ಮಳೆಗಾಲದಲ್ಲಿ ಸಮುದ್ರ ಸೇರುವ ಹೆಚ್ಚುವರಿ ನೀರನ್ನು ಸಂಗ್ರಹಿಸುವುದು ಯೋಜನೆಯ ಪ್ರಮುಖ ಗುರಿಯಾಗಿದೆ.
ಅಂದಾಜು 65 ರಿಂದ 66 ಟಿಎಂಸಿ ಹೆಚ್ಚುವರಿ ನೀರನ್ನು ಸಂಗ್ರಹಿಸುವ ಯೋಜನೆ ಇದಾಗಿದೆ. ಇದರ ಮೂಲಕ ಬೆಂಗಳೂರಿನ ಭವಿಷ್ಯದ ನೀರಿನ ಬೇಡಿಕೆಯನ್ನು ಪೂರೈಸುವುದರ ಜೊತೆಗೆ ವಿದ್ಯುತ್ ಉತ್ಪಾದನೆಗೂ ಅವಕಾಶ ಸಿಗಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.
ಇನ್ನೊಂದೆಡೆ, ತಮಿಳುನಾಡು ಈ ಯೋಜನೆಯಿಂದ ಕಾವೇರಿ ನೀರಿನ ಹಂಚಿಕೆಗೆ ಸಮಸ್ಯೆಯಾಗಬಹುದು ಎಂಬ ಆತಂಕ ವ್ಯಕ್ತಪಡಿಸುತ್ತಿದೆ. ಹೀಗಾಗಿ ಮೇಕೆದಾಟು ವಿಚಾರ ಮುಂದಿನ ದಿನಗಳಲ್ಲೂ ರಾಜಕೀಯ ಮತ್ತು ಕಾನೂನು ಹೋರಾಟದ ಕೇಂದ್ರಬಿಂದುವಾಗುವ ಸಾಧ್ಯತೆ ಇದೆ.





