ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ‘ಚಲೋ ಸಂಸತ್’ ಮೆರವಣಿಗೆ ದೆಹಲಿಯಲ್ಲಿ ಉದ್ವಿಗ್ನತೆ ಸೃಷ್ಟಿಸಿದೆ.. NEET ಪರೀಕ್ಷೆಯಲ್ಲಿನ ಅಕ್ರಮ ಆರೋಪಗಳನ್ನು ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಆಯೋಜಿಸಲಾದ ‘ಚಲೋ ಸಂಸತ್’ ಪ್ರತಿಭಟನೆ ಭುಗಿಲೆದ್ದಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಭದ್ರತಾ ಕಾರಣಗಳಿಂದ ಸಂಸತ್ ಭವನದ ಸುತ್ತಮುತ್ತ ಹಾಗೂ ಕೆಲವು ಪ್ರದೇಶಗಳಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಜಂತರ್ ಮಂತರ್‌ನಿಂದ ಸಂಸತ್ ಭವನದತ್ತ ಮೆರವಣಿಗೆ ನಡೆಸಲು CJP ಕರೆ ನೀಡಿತ್ತು. ಈ ಹಿನ್ನೆಲೆ ಸಾವಿರಾರು ಕಾರ್ಯಕರ್ತರು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಜಂತರ್ ಮಂತರ್‌ನಲ್ಲಿ ಸೇರಿದ್ದರು. ಮೆರವಣಿಗೆ ಆರಂಭವಾಗುತ್ತಿದ್ದಂತೆ ಪೊಲೀಸರು ಬ್ಯಾರಿಕೇಡ್‌ಗಳನ್ನು ನಿರ್ಮಿಸಿ ಪ್ರತಿಭಟನಾಕಾರರನ್ನು ತಡೆದರು. ಕೆಲವರು ಬ್ಯಾರಿಕೇಡ್‌ಗಳನ್ನು ದಾಟಲು ಯತ್ನಿಸಿದಾಗ ಪರಿಸ್ಥಿತಿ ಉದ್ವಿಗ್ನಗೊಂಡಿತು.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಮೊದಲು ಎಚ್ಚರಿಕೆ ನೀಡಿದರೂ, ಪರಿಸ್ಥಿತಿ ಹದಗೆಟ್ಟ ಹಿನ್ನೆಲೆ ಲಾಠಿಚಾರ್ಜ್ ನಡೆಸಿ ಹಲವರನ್ನು ವಶಕ್ಕೆ ಪಡೆದರು. ಕೆಲವು ಸ್ಥಳಗಳಲ್ಲಿ ಅಶ್ರುವಾಯು ಹಾಗೂ ಜಲಪ್ರಯೋಗ ಕೂಡ ನಡೆದಿರುವ ಮಾಹಿತಿ ಲಭ್ಯವಾಗಿದೆ. ಇದೇ ವೇಳೆ ಕೆಲವು ಪ್ರತಿಭಟನಾಕಾರರು ಪೊಲೀಸರತ್ತ ಕಲ್ಲು ತೂರಿದ್ದಾರೆ ಎನ್ನಲಾಗಿದ್ದು, ಘಟನೆಯಲ್ಲಿ ಒಬ್ಬ ದೆಹಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಗಾಯಗೊಂಡಿದ್ದಾರೆ.
ಸಂಸತ್ ಅಧಿವೇಶನ ಹಿನ್ನೆಲೆ ಈಗಾಗಲೇ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿತ್ತು. ಈ ಮೆರವಣಿಗೆಗೆ ಯಾವುದೇ ಅಧಿಕೃತ ಅನುಮತಿ ನೀಡಲಾಗಿರಲಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟಪಡಿಸಿದ್ದು, ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರತಿಭಟನೆಯ ನಡುವೆ CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಆದರೆ ಈ ಕುರಿತು ಪೊಲೀಸರು ಅಧಿಕೃತ ಮಾಹಿತಿ ನೀಡಿಲ್ಲ. ತಮ್ಮ ನಾಯಕನನ್ನು ವಶಕ್ಕೆ ಪಡೆದಿರುವುದನ್ನು ವಿರೋಧಿಸಿ ಪ್ರತಿಭಟನಾಕಾರರು ಮತ್ತಷ್ಟು ಆಕ್ರೋಶ ವ್ಯಕ್ತಪಡಿಸಿದ್ದು, ಕೆಲವೆಡೆ ಪೊಲೀಸರೊಂದಿಗೆ ವಾಗ್ವಾದವೂ ನಡೆದಿದೆ.
ಪ್ರತಿಭಟನೆಯ ಪರಿಣಾಮ ಸಂಸತ್ ಭವನದ ಸುತ್ತಮುತ್ತ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಎಲ್ಲ ಪ್ರವೇಶ ದ್ವಾರಗಳನ್ನು ಬಂದ್ ಮಾಡಲಾಗಿದ್ದು, ಹೆಚ್ಚುವರಿ ಪೊಲೀಸ್ ಪಡೆ ಹಾಗೂ ರ್ಯಾಪಿಡ್ ಆಕ್ಷನ್ ಫೋರ್ಸ್ (RAF) ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮೆಟ್ರೋ ನಿಲ್ದಾಣಗಳಲ್ಲಿಯೂ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗಿದ್ದು, ಕೆಲವು ನಿಲ್ದಾಣಗಳಲ್ಲಿ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಜಂತರ್ ಮಂತರ್‌ನಿಂದ ಸುಮಾರು ನಾಲ್ಕು ಕಿಲೋಮೀಟರ್ ವ್ಯಾಪ್ತಿಯಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರು ಪರದಾಡಿದರು.
ಇದೇ ವೇಳೆ ಸಂಸತ್ ಒಳಗೂ NEET ಅಕ್ರಮ ವಿಚಾರ ಭಾರೀ ಚರ್ಚೆಗೆ ಗ್ರಾಸವಾಯಿತು. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿದವು. ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ಗದ್ದಲ ಹೆಚ್ಚಾಗುತ್ತಿದ್ದಂತೆ ಕಲಾಪವನ್ನು ಪದೇಪದೇ ಮುಂದೂಡಲಾಯಿತು.
ಅಧಿವೇಶನ ಆರಂಭವಾದ ಕೆಲವೇ ಗಂಟೆಗಳಲ್ಲಿ ಹಲವು ಬಾರಿ ಕಲಾಪ ಸ್ಥಗಿತಗೊಂಡಿದ್ದು, ಕೊನೆಗೆ ಉಭಯ ಸದನಗಳ ಕಾರ್ಯಚಟುವಟಿಕೆಯನ್ನು ಮರುದಿನಕ್ಕೆ ಮುಂದೂಡಲಾಯಿತು. ಮುಂಗಾರು ಅಧಿವೇಶನದ ಮೊದಲ ದಿನವೇ ಸಂಸತ್ ಒಳಗೂ ಹೊರಗೂ ನಡೆದ ಬೆಳವಣಿಗೆಗಳು ದೇಶದ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿವೆ.
NEET ಪರೀಕ್ಷೆಯಲ್ಲಿನ ಅಕ್ರಮ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂಬುದು ಪ್ರತಿಭಟನಾಕಾರರು ಮತ್ತು ವಿಪಕ್ಷಗಳ ಪ್ರಮುಖ ಬೇಡಿಕೆಯಾಗಿದೆ. ಮುಂದಿನ ದಿನಗಳಲ್ಲಿ ಈ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ ದೆಹಲಿಯಲ್ಲಿ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ.




