100 ವರ್ಷದ ಹಿಂದೂ ದೇವಾಲಯ ಧ್ವಂಸ ಪ್ರಕರಣ: ತನಿಖೆಗೆ ಭಾರತ ಒತ್ತಾಯ

Untitled design 2026 09 03T112158.086

ನವದೆಹಲಿ: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರೋವಾಲ್ ಜಿಲ್ಲೆಯ ಸಿರಾಜ್ ಗ್ರಾಮದಲ್ಲಿರುವ ಸುಮಾರು 100 ವರ್ಷಗಳಷ್ಟು ಹಳೆಯ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿರುವ ಘಟನೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಕೃತ್ಯವನ್ನು ಖಂಡನೀಯ ಹಾಗೂ ಧಾರ್ಮಿಕ ಪರಂಪರೆಯ ಮೇಲಿನ ಗಂಭೀರ ದಾಳಿ ಎಂದು ಬಣ್ಣಿಸಿರುವ ಭಾರತ, ಘಟನೆ ಕುರಿತು ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನ ಸರ್ಕಾರವನ್ನು ಒತ್ತಾಯಿಸಿದೆ.

ವರದಿಗಳ ಪ್ರಕಾರ, ಆಗಸ್ಟ್ 21ರಂದು ಸಿರಾಜ್ ಗ್ರಾಮದಲ್ಲಿದ್ದ ಐತಿಹಾಸಿಕ ಹಿಂದೂ ದೇವಾಲಯವನ್ನು ಧ್ವಂಸ ಮಾಡಲಾಗಿದೆ. ಈ ಗ್ರಾಮವು ಲಾಹೋರ್ ನಗರದಿಂದ ಸುಮಾರು 130 ಕಿಲೋಮೀಟರ್ ದೂರದಲ್ಲಿದೆ. ಈ ದೇವಾಲಯ ಸ್ಥಳೀಯ ಹಿಂದೂ ಸಮುದಾಯದ ಧಾರ್ಮಿಕ ನಂಬಿಕೆ ಹಾಗೂ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿತ್ತು ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ದೇವಾಲಯ ಧ್ವಂಸದ ವರದಿಗಳನ್ನು ಭಾರತ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ. ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಅಲ್ಪಸಂಖ್ಯಾತ ಸಮುದಾಯದ ಆರಾಧನಾ ಸ್ಥಳವನ್ನು ನಾಶಪಡಿಸಿರುವುದು ಅತ್ಯಂತ ಖಂಡನೀಯ ಕೃತ್ಯ ಎಂದು ಅವರು ಹೇಳಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಪಾಕಿಸ್ತಾನವನ್ನು ಒತ್ತಾಯಿಸಿದೆ.

ಇದು ಕೇವಲ ಒಂದು ಧಾರ್ಮಿಕ ಕಟ್ಟಡದ ಮೇಲಿನ ದಾಳಿ ಮಾತ್ರವಲ್ಲ, ಅಲ್ಲಿನ ಅಲ್ಪಸಂಖ್ಯಾತ ಸಮುದಾಯಗಳ ಹಕ್ಕುಗಳು ಮತ್ತು ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ಗಂಭೀರ ಹಲ್ಲೆಯಾಗಿದೆ ಎಂದು ಭಾರತ ಅಭಿಪ್ರಾಯಪಟ್ಟಿದೆ. ಜೊತೆಗೆ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸುವಲ್ಲಿ ಪಾಕಿಸ್ತಾನದ ಆಡಳಿತ ವ್ಯವಸ್ಥೆ ವಿಫಲವಾಗಿದೆ ಎಂಬುದನ್ನೂ ಈ ಘಟನೆ ತೋರಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲೆ ಇಂತಹ ದಾಳಿಗಳು ಮರುಕಳಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಧಾರ್ಮಿಕ ಸ್ವಾತಂತ್ರ್ಯ, ಆರಾಧನಾ ಸ್ಥಳಗಳ ಭದ್ರತೆ ಮತ್ತು ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಶ್ನೆಗಳು ಎದ್ದುಕೊಳ್ಳುವಂತಾಗಿದೆ. ಈ ಹಿನ್ನೆಲೆಯಲ್ಲಿ ದೇವಾಲಯ ಧ್ವಂಸ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ನ್ಯಾಯ ಒದಗಿಸಬೇಕೆಂದು ಭಾರತ ಆಗ್ರಹಿಸಿದೆ.

Exit mobile version