ಸಂಸತ್ತಿನಲ್ಲಿ ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಮಸೂದೆ ಮಂಡನೆ

ಖರ್ಜೂರನಾ (11)

ನವದೆಹಲಿ (ಜು.27): ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್ ಪರೀಕ್ಷಾ ಅಕ್ರಮ ಮತ್ತು ಇತ್ತೀಚಿನ ವಿದ್ಯಾರ್ಥಿ ಪ್ರತಿಭಟನೆಗಳ ಹಿನ್ನೆಲೆ, ಪ್ರಶ್ನೆಪತ್ರಿಕೆ ಸೋರಿಕೆ (Question Paper Leak) ಮಾಫಿಯಾವನ್ನು ಮಟ್ಟಹಾಕಲು ಕೇಂದ್ರ ಸರ್ಕಾರ ಪ್ರಮುಖ ಕ್ರಮ ಕೈಗೊಂಡಿದೆ. ‘ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026’ ಅನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಲೋಕಸಭೆಯಲ್ಲಿ ಮಂಡಿಸಿದರು. ಈ ಮಸೂದೆಯು ಪರೀಕ್ಷಾ ಅಕ್ರಮಗಳಿಗೆ ಕಠಿಣ ಶಿಕ್ಷೆಯನ್ನು ವಿಧಿಸುವ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವ ಗುರಿಯನ್ನು ಹೊಂದಿದೆ.

ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಕಾಪಾಡುವುದು ಹಾಗೂ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಸುರಕ್ಷಿತಗೊಳಿಸುವ ಉದ್ದೇಶದಿಂದ ಈ ತಿದ್ದುಪಡಿ ಮಸೂದೆಯಲ್ಲಿ ಅತ್ಯಂತ ಕಠಿಣ ಶಿಕ್ಷೆಗಳನ್ನೊಳಗೊಂಡ ಹಲವು ಮಹತ್ವದ ನಿಯಮಗಳನ್ನು ಸೇರಿಸಲಾಗಿದೆ. ಇತ್ತೀಚಿನ ನೀಟ್ ಅಕ್ರಮ ಹಾಗೂ ವಿದ್ಯಾರ್ಥಿ ಪ್ರತಿಭಟನೆಗಳ ಬಳಿಕ ಸರ್ಕಾರ ಈ ಕಾನೂನನ್ನು ಇನ್ನಷ್ಟು ಬಲಿಷ್ಠಗೊಳಿಸಲು ಮುಂದಾಗಿದೆ.

ಮಸೂದೆ ಕುರಿತು ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, “ದೇಶದ ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡುವುದು ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ. ಪರೀಕ್ಷಾ ಅಕ್ರಮಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಉದ್ದೇಶದಿಂದ ಈ ಕಠಿಣ ಕಾನೂನನ್ನು ಜಾರಿಗೆ ತರಲಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ಗದ್ದಲ ಮಾಡದೆ  ಚರ್ಚೆಯಲ್ಲಿ ಭಾಗವಹಿಸಬೇಕು” ಎಂದು ಮನವಿ ಮಾಡಿದರು.

ಮಸೂದೆಯಲ್ಲಿರುವ ಪ್ರಮುಖ ಅಂಶಗಳು

ಹೊಸ ತಿದ್ದುಪಡಿ ಪ್ರಕಾರ, ಪರೀಕ್ಷೆಗಳಲ್ಲಿ ಅಕ್ರಮ ನಡೆಸುವವರಿಗೆ 5 ರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಸಂಘಟಿತ ರೀತಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ನಡೆಸಿದರೆ 10 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ₹10 ಕೋಟಿ ವರೆಗೆ ದಂಡ ವಿಧಿಸುವ ಪ್ರಾವಧಾನವಿದೆ.

ಯಾವುದೇ ಕೋಚಿಂಗ್ ಸೆಂಟರ್ ಅಥವಾ ತರಬೇತಿ ಸಂಸ್ಥೆ ಪ್ರಶ್ನೆ ಪತ್ರಿಕೆ ಸೋರಿಕೆ ಅಥವಾ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವುದು ಸಾಬೀತಾದರೆ, ಆ ಸಂಸ್ಥೆಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರ ಸರ್ಕಾರಕ್ಕೆ ಲಭ್ಯವಾಗಲಿದೆ.

ಇದಲ್ಲದೆ, ಪರೀಕ್ಷೆಗಳನ್ನು ನಡೆಸುವ ಖಾಸಗಿ ಸಂಸ್ಥೆಗಳು ಅಥವಾ ಏಜೆನ್ಸಿಗಳು ಅಕ್ರಮದಲ್ಲಿ ಭಾಗಿಯಾಗಿರುವುದು ದೃಢಪಟ್ಟರೆ, ಅವುಗಳನ್ನು 8 ವರ್ಷಗಳ ಕಾಲ ಕಪ್ಪುಪಟ್ಟಿಗೆ (Black List) ಸೇರಿಸಲಾಗುವುದು. ಸಂಸ್ಥೆಯ ಹಿರಿಯ ಅಧಿಕಾರಿಗಳು ಹಾಗೂ ನಿರ್ದೇಶಕರಿಗೂ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶವನ್ನು ಮಸೂದೆಯಲ್ಲಿ ಸೇರಿಸಲಾಗಿದೆ.

ಫಾಸ್ಟ್ ಟ್ರ್ಯಾಕ್ ತನಿಖೆಗೆ ಆದ್ಯತೆ

ಪರೀಕ್ಷಾ ಅಕ್ರಮ ಪ್ರಕರಣಗಳ ತನಿಖೆಯನ್ನು ವಿಳಂಬವಾಗದಂತೆ ಮಾಡಲು ಸರ್ಕಾರ ವಿಶೇಷ ಕ್ರಮ ಕೈಗೊಂಡಿದೆ. ಪ್ರಕರಣದ ತನಿಖೆಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸುವುದು, ನಂತರ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳಲ್ಲಿ ಪ್ರತಿದಿನ ವಿಚಾರಣೆ ನಡೆಸುವುದು, ಹಾಗೂ ಆರೋಪಪಟ್ಟಿ ಸಲ್ಲಿಕೆಯಾದ ಮೂರು ತಿಂಗಳೊಳಗೆ ತೀರ್ಪು ನೀಡುವುದು ಕಡ್ಡಾಯವಾಗಲಿದೆ. ಇದರ ಮೂಲಕ ವಿದ್ಯಾರ್ಥಿಗಳಿಗೆ ತ್ವರಿತ ನ್ಯಾಯ ದೊರಕುವ ನಿರೀಕ್ಷೆ ಇದೆ.

ನಂದನ್ ನಿಲೇಕಣಿ ನೇತೃತ್ವದಲ್ಲಿ ಕಾರ್ಯಪಡೆ

ಮಸೂದೆ ಮಂಡನೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಪಾರದರ್ಶಕ ಮತ್ತು ತಂತ್ರಜ್ಞಾನ ಆಧಾರಿತವಾಗಿಸಲು ಮಹತ್ವದ ಘೋಷಣೆ ಮಾಡಿದರು. ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಆರು ಸದಸ್ಯರ ಉನ್ನತಾಧಿಕಾರದ ಕಾರ್ಯಪಡೆಯನ್ನು ರಚಿಸಲಾಗಿದ್ದು, ಡಿಜಿಟಲ್ ಭದ್ರತೆ, ಪ್ರಶ್ನೆ ಪತ್ರಿಕೆ ಸಂರಕ್ಷಣೆ ಹಾಗೂ ಪರೀಕ್ಷಾ ಪ್ರಕ್ರಿಯೆಯ ಸುಧಾರಣೆಗೆ ಶಿಫಾರಸುಗಳನ್ನು ನೀಡಲಿದೆ.

Exit mobile version