ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ರೆ 10 ಕೋಟಿ ದಂಡ.. 10 ವರ್ಷ ಜೈಲು ಫಿಕ್ಸ್..!

ನವದೆಹಲಿ, (ಜುಲೈ 24): ದೇಶದಲ್ಲಿ ಬಹುದೊಡ್ಡ ಚರ್ಚೆಗೆ ಕಾರಣವಾಗಿದ್ದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆಗೆ ಇಂದು ಅನುಮೋದನೆ ನೀಡಲಾಗಿದೆ.

10 ವರ್ಷಗಳ ಜೈಲು ಶಿಕ್ಷೆ ಹಾಗೂ 10 ಕೋಟಿ ರೂವರೆಗೆ ದಂಡ

ಹೊಸ ತಿದ್ದುಪಡಿ ಮಸೂದೆಯ ಪ್ರಕಾರ, ಪ್ರಶ್ನೆಪತ್ರಿಕೆ ಸೋರಿಕೆ ಅಥವಾ ಸಂಘಟಿತ ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗುವವರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ತಪ್ಪಿತಸ್ಥರಿಗೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಹಾಗೂ 10 ಕೋಟಿ ರೂಪಾಯಿ ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಅಕ್ರಮ ನಡೆಸುವ ಸಂಘಟಿತ ಜಾಲಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಉದ್ದೇಶದಿಂದ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.

ಮೂರು ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸುವುದು ಕಡ್ಡಾಯ

ಇದರ ಜೊತೆಗೆ, ಇಂತಹ ಪ್ರಕರಣಗಳ ತ್ವರಿತ ವಿಚಾರಣೆಗೆ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸಲಾಗುತ್ತದೆ. ಪ್ರಕರಣ ದಾಖಲಾಗಿದ ನಂತರ ಮೂರು ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡುವುದು ಕಡ್ಡಾಯವಾಗಲಿದೆ. ಇದರಿಂದ ವರ್ಷಗಟ್ಟಲೆ ನ್ಯಾಯಕ್ಕಾಗಿ ಕಾಯುವ ಪರಿಸ್ಥಿತಿ ತಪ್ಪಲಿದೆ ಎಂದು ಸರ್ಕಾರ ಹೇಳಿದೆ.

ಪ್ರಸ್ತುತ ಜಾರಿಯಲ್ಲಿರುವ 2024ರ ಸಾರ್ವಜನಿಕ ಪರೀಕ್ಷೆಗಳ ಕಾಯ್ದೆಯ ಪ್ರಕಾರ, ಪ್ರಶ್ನೆಪತ್ರಿಕೆ ಸೋರಿಕೆಗೆ 3ರಿಂದ 5 ವರ್ಷ ಜೈಲು ಹಾಗೂ ₹10 ಲಕ್ಷದವರೆಗೆ ದಂಡ ವಿಧಿಸುವ ಅವಕಾಶವಿದೆ. ಸಂಘಟಿತ ಗ್ಯಾಂಗ್ ಭಾಗಿಯಾಗಿದ್ದರೆ 5ರಿಂದ 10 ವರ್ಷ ಜೈಲು ಮತ್ತು ಕನಿಷ್ಠ ₹1 ಕೋಟಿ ದಂಡ ವಿಧಿಸಲಾಗುತ್ತದೆ. ಹೊಸ ತಿದ್ದುಪಡಿ ಈ ಕಾನೂನನ್ನು ಇನ್ನಷ್ಟು ಕಠಿಣಗೊಳಿಸಿ, ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸುವ ಜೊತೆಗೆ ತ್ವರಿತ ನ್ಯಾಯದ ವ್ಯವಸ್ಥೆಯನ್ನು ಒದಗಿಸುತ್ತದೆ.

ಸೋಮವಾರ ಲೋಕಸಭೆಯಲ್ಲಿ ಮಸೂದೆ ಮಂಡನೆ

ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಈ ಮಸೂದೆಯ ನೋಡಲ್ ಸಚಿವಾಲಯವಾಗಿದ್ದು, ಸೋಮವಾರ ಲೋಕಸಭೆಯಲ್ಲಿ ಮಸೂದೆ ಮಂಡನೆಯಾಗಲಿದೆ.

ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂದೇಶದಲ್ಲಿ, ಪ್ರಶ್ನೆಪತ್ರಿಕೆ ಸೋರಿಕೆ ಕೇವಲ ಒಂದು ಅಪರಾಧವಲ್ಲ, ಅದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಕುಟುಂಬಗಳ ಕನಸುಗಳಿಗೆ ಹೊಡೆತ ನೀಡುವ ಗಂಭೀರ ಸಮಸ್ಯೆ ಎಂದು ಹೇಳಿದ್ದಾರೆ. ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸುವುದು, ವಿದ್ಯಾರ್ಥಿಗಳ ವಿಶ್ವಾಸ ಮರುಸ್ಥಾಪಿಸುವುದು ಹಾಗೂ ಪರೀಕ್ಷಾ ಅಕ್ರಮಗಳಿಗೆ ಶಾಶ್ವತ ಬ್ರೇಕ್ ಹಾಕುವುದು ಸರ್ಕಾರದ ಗುರಿಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Exit mobile version