ನವದೆಹಲಿ, ಜುಲೈ(24): ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ವಿಚಾರವಾಗಿ ಪ್ರತಿಪಕ್ಷಗಳು ಸಂಸತ್‌ನ ಎರಡೂ ಸದನಗಳಲ್ಲಿ ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯಸಭೆ ಹಾಗೂ ಲೋಕಸಭೆ ಕಲಾಪಗಳನ್ನು ಸೋಮವಾರದವರೆಗೆ ಮುಂದೂಡಲಾಗಿದೆ.
ಶುಕ್ರವಾರ ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳ ಸದಸ್ಯರು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸದನದ ಮಧ್ಯಭಾಗಕ್ಕೆ ಧಾವಿಸಿ ಘೋಷಣೆಗಳನ್ನು ಕೂಗಿದರು. ಇದರಿಂದ ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿ ಕಲಾಪವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.
ಬಳಿಕ ಮಧ್ಯಾಹ್ನ 12 ಗಂಟೆಗೆ ಸದನ ಪುನರಾರಂಭವಾದಾಗ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾತನಾಡಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಹೇಳಿದರು. ಈ ವಿಷಯದ ಗಂಭೀರತೆಯನ್ನು ಪರಿಗಣಿಸಿ ಚರ್ಚೆಗೆ ಅವಕಾಶ ನೀಡಬೇಕೆಂದು ವಿರೋಧ ಪಕ್ಷಗಳಿಗೆ ಮನವಿ ಮಾಡಿದರು.
“ಚರ್ಚೆ ಆರಂಭವಾಗುವ ಮೊದಲು ಪೂರ್ವ ಷರತ್ತುಗಳನ್ನು ವಿಧಿಸುವುದು ಮತ್ತು ನಿರಂತರ ಗದ್ದಲ ಸೃಷ್ಟಿಸುವುದು ದೇಶದ ಜನತೆಗೆ ತಪ್ಪು ಸಂದೇಶ ನೀಡುತ್ತದೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಗಂಭೀರ ವಿಷಯದ ಕುರಿತು ಸಂಸತ್ತಿನಲ್ಲಿ ಸಮಗ್ರ ಚರ್ಚೆ ನಡೆಯಬೇಕು” ಎಂದು ರಿಜಿಜು ಹೇಳಿದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತರಲಾಗುವುದು ಹಾಗೂ ಆರೋಪಿಗಳ ವಿಚಾರಣೆಗೆ ಫಾಸ್ಟ್-ಟ್ರಾಕ್ ನ್ಯಾಯಾಲಯಗಳ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿರುವುದನ್ನು ಸಚಿವರು ಸದನದ ಗಮನಕ್ಕೆ ತಂದರು.
ಆದರೆ ಕಾಂಗ್ರೆಸ್ ಹಾಗೂ ಇತರೆ ಪ್ರತಿಪಕ್ಷಗಳು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ತಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದವು. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾತನಾಡಲು ಅವಕಾಶ ಕೇಳಿದರೂ, ಸಚಿವರ ಅಧಿಕೃತ ದಾಖಲೆ ಮಂಡನೆ ಪೂರ್ಣಗೊಂಡ ಬಳಿಕ ಅವಕಾಶ ನೀಡಲಾಗುವುದು ಎಂದು ಅಧ್ಯಕ್ಷರು ತಿಳಿಸಿದರು.
ಗದ್ದಲ ಮತ್ತು ಪ್ರತಿಭಟನೆಗಳು ಮುಂದುವರಿದ ಹಿನ್ನೆಲೆಯಲ್ಲಿ ರಾಜ್ಯಸಭೆ ಹಾಗೂ ಲೋಕಸಭೆ ಕಲಾಪಗಳನ್ನು ಸೋಮವಾರದವರೆಗೆ ಮುಂದೂಡುವ ನಿರ್ಧಾರ ಕೈಗೊಳ್ಳಲಾಯಿತು.
