ರಾಮಮಂದಿರ ಹುಂಡಿ ಹಣ ಪ್ರಕರಣ: ಸಿಬಿಐ ತನಿಖೆಗೆ ಅಲಹಾಬಾದ್ ಹೈಕೋರ್ಟ್ ನಕಾರ

ಹೆಂಡ್ತಿಯರ (7)

ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗದ ಆರೋಪದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾದ ಪಿಐಎಲ್ ಅನ್ನು ಆಲಿಸಲು ಅಲಹಾಬಾದ್ ಹೈಕೋರ್ಟ್ ಸೋಮವಾರ ನಿರಾಕರಿಸಿದೆ ಮತ್ತು ಅರ್ಜಿಯನ್ನು ವಜಾಗೊಳಿಸಿದೆ. ಇದೇ ವಿಷಯದ ಕುರಿತು ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಬಾಕಿ ಇರುವಾಗ, ಹೈಕೋರ್ಟ್‌ನಲ್ಲಿ ಮತ್ತೆ ಪ್ರತ್ಯೇಕ ವಿಚಾರಣೆ ಮಾಡುವ ಅಗತ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ನ್ಯಾಯಮೂರ್ತಿಗಳಾದ ರಾಜನ್ ರಾಯ್ ಮತ್ತು ಮಂಜಿವೆ ಶುಕ್ಲಾ ಅವರನ್ನೊಳಗೊಂಡ ನ್ಯಾಯಾಲಯದ ಲಕ್ನೋ ಪೀಠವು ಮೋಹಿತ್ ಅಶೋಕ್ ಸಲ್ಲಿಸಿದ ಪಿಐಎಲ್ ಅನ್ನು ವಿಲೇವಾರಿ ಮಾಡಿದೆ. ರಾಮ ಮಂದಿರದಲ್ಲಿ ಭಕ್ತರು ನೀಡಿದ ದೇಣಿಗೆ ಮತ್ತು ಕಾಣಿಕೆಗಳ ದುರುಪಯೋಗದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಅರ್ಜಿದಾರರು ಕೋರಿದ್ದರು. ಭಾರತದ ಮಹಾಲೇಖಪಾಲರು ಮತ್ತು ಲೆಕ್ಕಪರಿಶೋಧಕರು (ಸಿಎಜಿ) ದೇವಾಲಯದ ಹಣಕಾಸಿನ ಲೆಕ್ಕಪರಿಶೋಧನೆಗೆ ನಿರ್ದೇಶನಗಳನ್ನು ನೀಡುವಂತೆಯೂ ಅರ್ಜಿಯಲ್ಲಿ ಕೋರಲಾಗಿತ್ತು.

ಆದರೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಅರ್ಜಿ ಸುಪ್ರೀಂ ಕೋರ್ಟ್ ಮುಂದಿದೆ. ಆದ್ದರಿಂದ ಅಲಹಾಬಾದ್ ಹೈಕೋರ್ಟ್ ಅರ್ಜಿಯ ಅರ್ಹತೆಯನ್ನು ಪರಿಶೀಲಿಸಲು ನಿರಾಕರಿಸಿದ್ದು, ಪ್ರಕರಣವನ್ನು ವಿಲೇವಾರಿ ಮಾಡಿದೆ. ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಬಾಕಿ ಇದ್ದಾಗ, ಅದೇ ವಿಷಯದಲ್ಲಿ ಹೈಕೋರ್ಟ್‌ನಲ್ಲಿ ಪ್ರತ್ಯೇಕ ಅರ್ಜಿ ಸಲ್ಲಿಸುವುದು ಸಮಂಜಸವಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಇನ್ನು ಇದಕ್ಕೂ ಮುನ್ನ, ಜೂನ್ 29ರಂದು ಅಯೋಧ್ಯೆಯ ರಾಮಮಂದಿರಕ್ಕಾಗಿ ‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ ಸಂಗ್ರಹಿಸಿದ್ದ ದೇಣಿಗೆಯಲ್ಲಿ ದುರ್ಬಳಕೆಯಾಗಿದೆ ಎಂಬ ಆರೋಪದ ಕುರಿತು ನ್ಯಾಯಸಮ್ಮತ ತನಿಖೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಯನ್ನು ನಡೆಸಲು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿತ್ತು. ವಕೀಲರಾದ ಅಜಯ್ ಕುಮಾರ್ ರೈ ಮತ್ತು ದಿನೇಶ್ ಕುಮಾರ್ ಯಾದವ್ ಅವರು ಈ ಅರ್ಜಿಯನ್ನು ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಶೀಲ್ ನಾಗು ಅವರನ್ನೊಳಗೊಂಡ ಪೀಠವು ಈ ಅರ್ಜಿಯನ್ನು ಕೈಗೆತ್ತಿಕೊಂಡಿದ್ದು, ತುರ್ತು ವಿಚಾರಣೆಗೆ ನಕಾರ ವ್ಯಕ್ತಪಡಿಸಿದ ನ್ಯಾಯಪೀಠವು, “ಈಗೇನು ಆಕಾಶ ಕಳಚಿ ಬೀಳುವುದಿಲ್ಲ… ಇದರಲ್ಲಿ ಅಂತಹ ತುರ್ತು ಏನಿದೆ?” ಎಂದು ಮೌಖಿಕವಾಗಿ ಪ್ರಶ್ನಿಸಿತು. ಅಲ್ಲದೆ, ಬೇಸಿಗೆ ರಜೆಯ ನಂತರ ಈ ವಿಷಯವನ್ನು ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ತಿಳಿಸಿತು.

ರಾಮಮಂದಿರ ಹುಂಡಿ ಹಣ ಕಳ್ಳತನ ಪ್ರಕರಣದಲ್ಲಿ ಪ್ರಸ್ತುತ ನಡೆಯುತ್ತಿರುವ ಎಸ್ಐಟಿ ತನಿಖೆಯನ್ನು ಮುಂದುವರೆಸುವಂತೆ ಅಲಹಾಬಾದ್ ಹೈಕೋರ್ಟ್ ಸೂಚಿಸಿದೆ. ಸಿಬಿಐ ತನಿಖೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಾಲಯ, ಪ್ರಸ್ತುತ ತನಿಖಾ ವ್ಯವಸ್ಥೆಯೇ ಸಮರ್ಪಕವಾಗಿದೆ ಎಂದು ಅಭಿಪ್ರಾಯಪಟ್ಟಿದೆ.

Exit mobile version