ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು ಮಾಡಿ; ದೆಹಲಿ ಹೈಕೋರ್ಟ್‌ಗೆ PIL

ವಾಂಗ್ಚುಕ್

ನವದೆಹಲಿ (ಜುಲೈ 15): ಪರಿಸರ ಹೋರಾಟಗಾರ ಹಾಗೂ ಶಿಕ್ಷಣತಜ್ಞ ಸೋನಂ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಅಗತ್ಯವಿದ್ದರೆ ವೈದ್ಯರ ಸಲಹೆಯಂತೆ ಬಲವಂತವಾಗಿ ಆಹಾರ ನೀಡುವಂತೆ ನಿರ್ದೇಶನ ಕೋರಿ ದೆಹಲಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿದೆ. 

ಕಾರ್ಯಕರ್ತ-ವಕೀಲ ರಾಕೇಶ್ ಕುಮಾರ್ ಸೈನಿ ಅವರು ವಾಂಗ್ಚುಕ್ ಗೆ ತುರ್ತು ವೈದ್ಯಕೀಯ ಚಿಕಿತ್ಸೆ ನೀಡುವಂತೆ ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ ನಂತರ ವಾಂಗ್ಚುಕ್ ಜೂನ್ 28 ರಿಂದ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ನಿರಂತರ ಉಪವಾಸದಿಂದ ಅವರ ಆರೋಗ್ಯದಲ್ಲಿ ತೀವ್ರ ಕುಸಿತ ಕಂಡು ಬಂದ ಹಿನ್ನಲೆಯಲ್ಲಿ, ಈವರೆಗೆ ಸುಮಾರು 8.5 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ವೈದ್ಯಕೀಯ ಚಿಕಿತ್ಸೆ ವಿಳಂಬವಾದರೆ ಅವರ ಜೀವಕ್ಕೆ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಅರ್ಜಿದಾರರು ನ್ಯಾಯಾಲಯದ ಗಮನ ಸೆಳೆದಿದ್ದಾರೆ. ಆದ್ದರಿಂದ ವಾಂಗ್ಚುಕ್ ಅವರನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡುವಂತೆ ಕೇಂದ್ರ ಸರ್ಕಾರ, ದೆಹಲಿ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಅಲ್ಲದೆ, ಆರೋಗ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟರೆ ವೈದ್ಯರ ಸಲಹೆ ಮತ್ತು ಕಾನೂನು ಪ್ರಕ್ರಿಯೆ ಅನುಸರಿಸಿ ಅಗತ್ಯವಿದ್ದರೆ ಬಲವಂತವಾಗಿ ಆಹಾರ (Force Feeding) ನೀಡಲು ಅವಕಾಶ ಕಲ್ಪಿಸುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ.

ಈ ಅರ್ಜಿಯನ್ನು ತುರ್ತು ವಿಚಾರಣೆಗೆ ಇಂದು ಬುಧವಾರವೇ ಕೈಗೆತ್ತಿಕೊಳ್ಳುವಂತೆ ಅರ್ಜಿದಾರರು ಮನವಿ ಮಾಡಲಾಗಿದ್ದರೂ, ದೆಹಲಿ ಹೈಕೋರ್ಟ್ ವಿಚಾರಣೆಯನ್ನು ನಾಳೆ ಗುರುವಾರ (ಜುಲೈ 16)ಕ್ಕೆ ನಿಗದಿಪಡಿಸಿದೆ. ಈ ನಡುವೆ ಹೈಕೋರ್ಟ್ ಕೇಂದ್ರ ಸರ್ಕಾರ ಹಾಗೂ ದೆಹಲಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ಅರ್ಜಿಗೆ ಸಂಬಂಧಿಸಿದಂತೆ ತಮ್ಮ ಉತ್ತರವನ್ನು ಸಲ್ಲಿಸುವಂತೆ ಸೂಚನೆ ನೀಡಿದೆ.

ಸೋನಂ ವಾಂಗ್ಚುಕ್ ಅವರ ಆರೋಗ್ಯದ ಬಗ್ಗೆ ದೇಶಾದ್ಯಂತ ಆತಂಕ ವ್ಯಕ್ತವಾಗಿದ್ದು, ವಿವಿಧ ಪರಿಸರ ಸಂಘಟನೆಗಳು, ಶಿಕ್ಷಣ ತಜ್ಞರು ಮತ್ತು ಸಾಮಾಜಿಕ ಕಾರ್ಯಕರ್ತರು ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಮತ್ತೊಂದೆಡೆ, ನ್ಯಾಯಾಲಯದ ವಿಚಾರಣೆಯ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.

Exit mobile version