ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ದೆಹಲಿ ಆಸ್ಪತ್ರೆಗೆ ದಾಖಲು

Untitled design 2026 01 06T115723.465

ನವದೆಹಲಿ: ಕಾಂಗ್ರೆಸ್ ಪಕ್ಷದ ಅಧಿನಾಯಕಿ ಹಾಗೂ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಮತ್ತೆ ಅನಾರೋಗ್ಯಕ್ಕೀಡಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಅವರನ್ನು ದೆಹಲಿಯ ಪ್ರಸಿದ್ಧ ಸರ್ ಗಂಗಾ ರಾಮ್ ಆಸ್ಪತ್ರೆಗೆ ಇಂದು ಮುಂಜಾನೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿತಿಯನ್ನು ಗಮನಿಸಿದ ವೈದ್ಯರು ತಕ್ಷಣವೇ ಆಸ್ಪತ್ರೆಗೆ ದಾಖಲಿಸುವಂತೆ ಸಲಹೆ ನೀಡಿದ್ದು, ಇದೀಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯ ವೈದ್ಯಕೀಯ ತಂಡವು ಅಗತ್ಯ ಪರೀಕ್ಷೆಗಳನ್ನು ನಡೆಸುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ. ಆದರೆ ವೈದ್ಯರ ಸಲಹೆ ಮೇರೆಗೆ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸೋನಿಯಾ ಗಾಂಧಿ ಅವರು ಕೆಲ ದಿನಗಳ ಹಿಂದಷ್ಟೇ ಹೊಟ್ಟೆಗೆ ಸಂಬಂಧಿಸಿದ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದ ಅವರು, ಆರೋಗ್ಯದಲ್ಲಿ ಸುಧಾರಣೆ ಕಂಡುಬಂದ ನಂತರ ಡಿಸ್ಚಾರ್ಜ್ ಆಗಿದ್ದರು. ಆದರೆ ಇದೀಗ ಮತ್ತೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಅವರನ್ನು  ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋನಿಯಾ ಗಾಂಧಿ ಅವರು ಕಳೆದ ಕೆಲವು ವರ್ಷಗಳಿಂದ ವಿವಿಧ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದು,  ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸೆ ಪಡೆಯುತ್ತಾ ಬಂದಿದ್ದಾರೆ. ಪಕ್ಷದ ಹಿರಿಯ ನಾಯಕರು ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್ ರಿಲೀಫ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ್ದ ಚಾರ್ಜ್‌ಶೀಟ್ ಅನ್ನು ಪರಿಗಣಿಸಲು ದೆಹಲಿ ರೂಸ್ ಅವೆನ್ಯೂ ನ್ಯಾಯಾಲಯ ಮಂಗಳವಾರ ನಿರಾಕರಿಸಿದೆ.

ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಇಡಿ ಸಲ್ಲಿಸಿದ್ದ ದೂರನ್ನು ವಿಚಾರಣೆಗೆ ತೆಗೆದುಕೊಳ್ಳುವ ಪ್ರಶ್ನೆಯನ್ನು ನ್ಯಾಯಾಲಯ ನಿರಾಕರಿಸಿದ್ದು, ಇದರಿಂದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ತಾತ್ಕಾಲಿಕ ನೆಮ್ಮದಿ ದೊರೆತಂತಾಗಿದೆ.

ಕೋರ್ಟ್ ಹೇಳಿದ್ದೇನು?

ರೂಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ (ಪಿಸಿ ಕಾಯ್ದೆ) ವಿಶಾಲ್ ಗೋಗೋ ಅವರು, ಈ ಪ್ರಕರಣದ  ಬಗ್ಗೆ ಮಹತ್ವದ ಅಂಶಗಳನ್ನು ಉಲ್ಲೇಖಿಸಿದರು. ಇಡಿ ಸಲ್ಲಿಸಿರುವ ದೂರು ಖಾಸಗಿ ದೂರಿನ ಆಧಾರದಲ್ಲಿದೆ, ಇದು ಪ್ರಥಮ ಮಾಹಿತಿ ವರದಿ (FIR) ಆಧಾರಿತವಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

PMLA ಕಾಯ್ದೆಯ ಅಡಿಯಲ್ಲಿ ಪ್ರಕರಣವನ್ನು ಮುಂದುವರಿಸಲು, ಮೂಲ ಅಪರಾಧಕ್ಕೆ ಸಂಬಂಧಿಸಿದಂತೆ ಮಾನ್ಯ ಎಫ್‌ಐಆರ್ ಅಥವಾ ಸರಿಯಾದ ಕಾನೂನು ಪ್ರಕ್ರಿಯೆ ಇರಬೇಕು. ಆದರೆ, ಈ ಪ್ರಕರಣದಲ್ಲಿ ಆ ಮಾನದಂಡಗಳು ಪೂರೈಸಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಇಡಿ ಚಾರ್ಜ್‌ಶೀಟ್‌ಗೆ ಹಿನ್ನಡೆ

ಇಡಿ ತನ್ನ ಚಾರ್ಜ್‌ಶೀಟ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಯಂಗ್ ಇಂಡಿಯನ್ ಕಂಪನಿಯ ಮೂಲಕ ಅಕ್ರಮವಾಗಿ ಆಸ್ತಿಗಳನ್ನು ವರ್ಗಾಯಿಸಿದ್ದಾರೆ ಎಂಬ ಆರೋಪ ಮಾಡಿತ್ತು. ಇಡಿ ಸಲ್ಲಿಸಿದ ದಾಖಲೆಗಳು ಹಾಗೂ ದೂರಿನ ಸ್ವರೂಪವನ್ನು ಪರಿಶೀಲಿಸಿದ ನ್ಯಾಯಾಲಯ, ಈ ಹಂತದಲ್ಲಿ ವಿಚಾರಣೆ ನಡೆಸಲು ಕಾನೂನು ಆಧಾರವಿಲ್ಲ ಎಂದು ತೀರ್ಮಾನಿಸಿದೆ.

ಕಾಂಗ್ರೆಸ್ ಪ್ರತಿಕ್ರಿಯೆ

ನ್ಯಾಯಾಲಯದ ಆದೇಶದ ಬಳಿಕ ಕಾಂಗ್ರೆಸ್ ವಲಯದಲ್ಲಿ ಸಂತಸ ವ್ಯಕ್ತವಾಗಿದೆ. ಪಕ್ಷದ ನಾಯಕರು, “ಇದು ರಾಜಕೀಯ ದ್ವೇಷದ ಫಲವಾಗಿ ದಾಖಲಿಸಿದ ಪ್ರಕರಣ. ಸತ್ಯ ಮತ್ತು ಸಂವಿಧಾನ ಗೆದ್ದಿದೆ” ಎಂದು ಪ್ರತಿಕ್ರಿಯಿಸಿದ್ದಾರೆ. ಈ ಆದೇಶವು ಇಡಿಗೆ ತಾತ್ಕಾಲಿಕ ಹಿನ್ನಡೆಯಾದರೂ, ಕಾನೂನು ಹೋರಾಟ ಇಲ್ಲಿ ಅಂತ್ಯವಾಗಿಲ್ಲ. ಇಡಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.

Exit mobile version