ಚಮೋಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ವಿಷ್ಣುಗಡ್–ಪಿಪಲೋಟಿ ಜಲವಿದ್ಯುತ್ ಯೋಜನೆಯ ಸುರಂಗದೊಳಗೆ ಎರಡು ಲೋಕೋ ರೈಲುಗಳು ಡಿಕ್ಕಿ ಹೊಡೆದಿವೆ. ಇದರ ಪರಿಣಾಮ ಸುಮಾರು 60ಕ್ಕೂ ಹೆಚ್ಚು ಕಾರ್ಮಿಕರು ಹಾಗೂ ಅಧಿಕಾರಿಗಳು ಗಾಯಗೊಂಡಿದ್ದಾರೆ. ಈ ದುರ್ಘಟನೆ ಪಿಪಲೋಟಿ ಸುರಂಗದ ಒಳಭಾಗದಲ್ಲಿ ನಡೆದಿದೆ ಎಂದು ಜಿಲ್ಲಾಡಳಿತ ದೃಢಪಡಿಸಿದೆ.
ಅಪಘಾತದ ವೇಳೆ ರೈಲಿನಲ್ಲಿ ಒಟ್ಟು 109 ಜನರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಸುಮಾರು 60 ಮಂದಿ ಗಾಯಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂದು ಚಮೋಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೌರವ್ ಕುಮಾರ್ ಮಾಹಿತಿ ನೀಡಿದ್ದಾರೆ. ಘಟನೆ ನಡೆದ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಗೊಂಡಿದ್ದು, ಸುರಂಗದೊಳಗಿದ್ದ ಎಲ್ಲರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.
ವಿಷ್ಣುಗಡ್–ಪಿಪಲೋಟಿ ಜಲವಿದ್ಯುತ್ ಯೋಜನೆಯ ಭಾಗವಾಗಿ ಸುರಂಗಗಳೊಳಗೆ ಕಾರ್ಮಿಕರು, ಅಧಿಕಾರಿಗಳು ಹಾಗೂ ನಿರ್ಮಾಣ ಸಾಮಗ್ರಿಗಳನ್ನು ಸಾಗಿಸಲು ಲೋಕೋ ರೈಲುಗಳನ್ನು ಬಳಸಲಾಗುತ್ತಿದೆ. ಇದೇ ವೇಳೆ, ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಒಂದು ಲೋಕೋ ರೈಲು, ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಸರಕು ರೈಲಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ರೈಲಿನಲ್ಲಿದ್ದವರು ಗಾಯಗೊಂಡಿದ್ದಾರೆ.
ಅಪಘಾತದ ಬಳಿಕ ತಕ್ಷಣವೇ ವೈದ್ಯಕೀಯ ನೆರವು ಒದಗಿಸಲಾಗಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಗೋಪೇಶ್ವರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಚಮೋಲಿಯ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ. ಉಳಿದ ಗಾಯಾಳುಗಳಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಹಳಿ ದಾಟುವಾಗ ರೈಲು ಡಿಕ್ಕಿ: ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಾ*ವು
ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ರೋಜಾ ಜಂಕ್ಷನ್ ಬಳಿ ಮನಕಲಕುವ ಘಟನೆಯೊಂದು ಸಂಭವಿಸಿದೆ. ಮಾನವರಹಿತ (ಗೂಡ್ಸ್ ರೈಲು) ರೈಲ್ವೆ ಕ್ರಾಸಿಂಗ್ ದಾಟುತ್ತಿದ್ದಾಗ ವೇಗವಾಗಿ ಬಂದ ಸರಕು ರೈಲು ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರು ಪುಟ್ಟ ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸರಕು ರೈಲು ಡಿಕ್ಕಿ ಹೊಡೆದ ರಭಸಕ್ಕೆ ಮೋಟಾರ್‌ಸೈಕಲ್ ರೈಲಿನ ಇಂಜಿನ್ ಅಡಿಯಲ್ಲಿ ಸಿಲುಕಿಕೊಂಡಿದೆ. ರೈಲು ತಕ್ಷಣ ನಿಲ್ಲದ ಕಾರಣ, ಬೈಕ್ ಮತ್ತು ಅದರಲ್ಲಿದ್ದವರನ್ನು ಸುಮಾರು 500 ಮೀಟರ್‌ಗಳಷ್ಟು ದೂರದವರೆಗೆ ಹಳಿಗಳ ಮೇಲೆ ಎಳೆದುಕೊಂಡು ಹೋಗಿದೆ. ಈ ಭೀಕರ ದೃಶ್ಯವನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಡಿಕ್ಕಿಯ ರಭಸಕ್ಕೆ ಐವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.
ಮೃತರನ್ನು ಲಖಿಂಪುರ ಖೇರಿಯ ಬಂಕಾ ಗ್ರಾಮದ ಹರಿಓಮ್ (40), ಅವರ ಸೋದರ ಮಾವ ಸೇರ್‌ಪಾಲ್, ಸೇರ್‌ಪಾಲ್ ಅವರ ಪತ್ನಿ ಪೂಜಾ (35) ಹಾಗೂ ಅವರ ಇಬ್ಬರು ಮಕ್ಕಳಾದ ಸೂರ್ಯ ಮತ್ತು ನಿಧಿ ಎಂದು ಗುರುತಿಸಲಾಗಿದೆ. ವಾರದ ಮಾರುಕಟ್ಟೆಯಲ್ಲಿ ಹಬ್ಬದ ಶಾಪಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದ ವೇಲೆ ಈ ದುರಂತ ಸಂಭವಿಸಿದೆ. ಸ್ಥಲದಲ್ಲಿ ಸಾವನ್ನಪ್ಪಿರುವ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಅಪಘಾತದ ಸುದ್ದಿ ತಿಳಿದ ತಕ್ಷಣ ರೋಜಾ ಪೊಲೀಸ್ ಠಾಣೆ ಮತ್ತು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ತಂಡಗಳು ಸ್ಥಳಕ್ಕೆ ಭೇಟಿ ನೀಡಿದೆ. ಶಹಜಹಾನ್‌ಪುರ ಎಸ್‌ಎಸ್‌ಪಿ ರಾಜೇಶ್ ದ್ವಿವೇದಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಹಳಿಗಳ ಮೇಲೆ ಚೆಲ್ಲಾಪಿಲ್ಲಿಯಾಗಿದ್ದ ಶವಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್ ಆಚೆ ಇರುವ ಈ ಕ್ರಾಸಿಂಗ್ ಮಾನವರಹಿತವಾಗಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಘಟನೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಮತ್ತು ಪರಿಹಾರ ಕಾರ್ಯಗಳನ್ನು ವಿಳಂಬವಿಲ್ಲದೆ ಪೂರ್ಣಗೊಳಿಸುವಂತೆ ಆದೇಶಿಸಿದ್ದಾರೆ. ಘಟನೆ ಸಂಬಂಧ ಸ್ಥಳೀಯರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.





