ವಂದೇ ಮಾತರಂನ 2 ಚರಣ ಹಾಡುವ ಕಾಂಗ್ರೆಸ್​ನ ನಿರ್ಧಾರ ಕಾನೂನಿಗೆ ವಿರುದ್ಧ: ಕೇಂದ್ರ ಗೃಹ ಸಚಿವ ಅಮಿತ್​ ಶಾ

Untitled design 2026 08 20T173007.744

ರಾಷ್ಟ್ರೀಯ ಗೀತೆ ವಂದೇ ಮಾತರಂನ ಎರಡು ಚರಣಗಳನ್ನು ಮಾತ್ರ ಪಕ್ಷದ ಕಾರ್ಯಕ್ರಮಗಳಲ್ಲಿ ಹಾಡುವಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಕೈಗೊಂಡಿರುವ ನಿರ್ಧಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನ ಈ ನಿರ್ಧಾರ ಕಾನೂನುಬದ್ಧವಾಗಿಲ್ಲ ಎಂದು ಆರೋಪಿಸಿರುವ ಅವರು, ಇದು ಮತಬ್ಯಾಂಕ್ ರಾಜಕಾರಣದ ಭಾಗವಾಗಿದೆ ಎಂದು ಟೀಕಿಸಿದ್ದಾರೆ.

ಈ ಕುರಿತು ವಿಡಿಯೋ ತುಣುಕನ್ನು ಅಮಿತ್ ಶಾ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬುಧವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ವಂದೇ ಮಾತರಂ ಅನ್ನು ಪೂರ್ಣವಾಗಿ ಹಾಡುವ ಬದಲು ಎರಡು ಪ್ಯಾರಾಗಳನ್ನು ಮಾತ್ರ ಹಾಡುವ ನಿರ್ಣಯ ಕೈಗೊಳ್ಳಲಾಗಿದೆ. ಈ ನಿರ್ಧಾರವು ಕಾಂಗ್ರೆಸ್‌ನ ವಿಭಜನಾತ್ಮಕ ರಾಜಕೀಯದ ಇತಿಹಾಸವನ್ನು ಮತ್ತೆ ನೆನಪಿಸುತ್ತದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ

1937ರಲ್ಲಿ ಕಾಂಗ್ರೆಸ್ ತನ್ನ ಮತಬ್ಯಾಂಕ್ ರಾಜಕಾರಣಕ್ಕಾಗಿ ವಂದೇ ಮಾತರಂ ಅನ್ನು ಎರಡು ಭಾಗಗಳಾಗಿ ವಿಭಜಿಸುವ ನಿರ್ಧಾರ ಕೈಗೊಂಡಿತ್ತು ಎಂದು ಅಮಿತ್ ಶಾ ಆರೋಪಿಸಿದ್ದಾರೆ. ಇದಾದ ಬಳಿಕ ಎರಡು ರಾಷ್ಟ್ರಗಳ ಬೇಡಿಕೆ ಬಲಗೊಂಡು, ಅಂತಿಮವಾಗಿ ದೇಶ ವಿಭಜನೆಗೆ ಕಾರಣವಾಯಿತು ಎಂದು ಹೇಳಿದ್ದಾರೆ.

ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಐತಿಹಾಸಿಕ ತಪ್ಪನ್ನು ಸರಿಪಡಿಸಿ, ಪೂರ್ಣ ಗೀತೆಗೆ ಕಾನೂನು ಮಾನ್ಯತೆ ನೀಡಿದೆ. ಆದರೆ ಇದೀಗ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಮತ್ತೆ ಮತಬ್ಯಾಂಕ್ ಓಲೈಕೆ ರಾಜಕಾರಣದ ಹಾದಿ ಹಿಡಿದಿದೆ ಎಂದು ಟೀಕಿಸಿದ್ದಾರೆ.

“ವಂದೇ ಮಾತರಂ ಅನ್ನು ವಿಭಜಿಸುವ ತಪ್ಪು ಈಗಾಗಲೇ ಒಮ್ಮೆ ನಡೆದಿದೆ. ಅದರ ಪರಿಣಾಮಗಳನ್ನು ದೇಶ ಅನುಭವಿಸಿದೆ. ಮತ್ತೆ ಅಂತಹ ಪರಿಸ್ಥಿತಿ ನಿರ್ಮಾಣವಾಗಬಾರದು,” ಎಂದು ಹೇಳಿದ್ದಾರೆ.

ಇದೇ ವಿಚಾರವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಕೂಡ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮತಗಳಿಗಾಗಿ ಕಾಂಗ್ರೆಸ್ ತನ್ನ ಮೂಲ ನಿಲುವುಗಳನ್ನು ಬದಿಗೊತ್ತಿ, ಹೊಸ ಮುಸ್ಲಿಂ ಲೀಗ್‌ನಂತೆ ವರ್ತಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ 1937ರಲ್ಲಿ ಕೈಗೊಂಡಿದ್ದ ನಿರ್ಣಯವನ್ನು ಅನುಸರಿಸಲು ತೀರ್ಮಾನಿಸಲಾಗಿದೆ. ಅದರಂತೆ, ಮುಂದಿನ ದಿನಗಳಲ್ಲಿ ಪಕ್ಷದ ಎಲ್ಲಾ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣಗಳನ್ನು ಮಾತ್ರ ಹಾಡಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ.

ಈ ನಿರ್ಧಾರ ಇದೀಗ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಕಾಂಗ್ರೆಸ್ ತನ್ನ ನಿರ್ಧಾರವನ್ನು ಐತಿಹಾಸಿಕ ನಿರ್ಣಯದ ಅನುಸರಣೆಯೆಂದು ಸಮರ್ಥಿಸಿಕೊಂಡರೆ, ಬಿಜೆಪಿ ಇದನ್ನು ಮತಬ್ಯಾಂಕ್ ರಾಜಕಾರಣ ಎಂದು ಆರೋಪಿಸುತ್ತಿದೆ. ವಂದೇ ಮಾತರಂ ಕುರಿತ ಈ ಹೊಸ ವಿವಾದ ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.

Exit mobile version