ನವದೆಹಲಿ: ಜಗದೀಪ್ ಧನಕರ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾದ ಉಪ ರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯ ಆಯ್ಕೆಯಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರ ಹೆಸರು ಮುಂಚೂಣಿಯಲ್ಲಿತ್ತು ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಈ ಸಂಬಂಧ ಭಾನುವಾರ ಸಂಸದೀಯ ಮಂಡಳಿಯ ಸಭೆ ನಡೆಯಲಿದ್ದು, ಅಭ್ಯರ್ಥಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ. ಸೋಮವಾರದಂದು ಬಿಜೆಪಿ ತನ್ನ ಅಧಿಕೃತ ಅಭ್ಯರ್ಥಿಯ ಹೆಸರನ್ನು ಘೋಷಿಸಲಿದೆ ಎಂದು ನಿರೀಕ್ಷಿಸಲಾಗಿದೆ.
ಎನ್‌ಡಿಎ ಮಿತ್ರಪಕ್ಷಗಳ ಸಭೆ:
ಮಂಗಳವಾರ ಎನ್‌ಡಿಎ ಮಿತ್ರಪಕ್ಷಗಳ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮಿತ್ರಪಕ್ಷಗಳು ತಮ್ಮ ಬೆಂಬಲವನ್ನು ವ್ಯಕ್ತಪಡಿಸಲಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಸಭೆಯಲ್ಲಿ ಅಭ್ಯರ್ಥಿಯ ಹೆಸರನ್ನು ಘೋಷಿಸುವ ಸಾಧ್ಯತೆ ಇದೆ. ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಆಗಸ್ಟ್ 21 ಕೊನೆಯ ದಿನವಾಗಿದೆ. “ನಾಮಪತ್ರ ಸಲ್ಲಿಕೆಯ ದಿನ ಬಿಜೆಪಿಯು ತನ್ನ ಶಕ್ತಿಪ್ರದರ್ಶನ ಮಾಡಲಿದೆ. ಬಿಜೆಪಿ ಅಧಿಕಾರದಲ್ಲಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ,” ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ವಿರೋಧ ಪಕ್ಷಗಳ ಕುತೂಹಲ:
ಕಳೆದ ವಾರ ಎನ್‌ಡಿಎ ಮಿತ್ರಪಕ್ಷಗಳ ಸಭೆಯಲ್ಲಿ ಅಭ್ಯರ್ಥಿ ಆಯ್ಕೆಯ ನಿರ್ಧಾರವನ್ನು ಪ್ರಧಾನಿ ಮೋದಿ ಅವರಿಗೆ ಬಿಟ್ಟಿದ್ದವು. ಸೆಪ್ಟೆಂಬರ್ 9 ರಂದು ಮತದಾನ ನಡೆಯಲಿದೆ. ವಿರೋಧ ಪಕ್ಷಗಳು ತಮ್ಮದೇ ಆದ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತವೆಯೇ ಎಂಬುದು ಕುತೂಹಲ ಮೂಡಿಸಿದೆ.
ಪಕ್ಷ ನಿಷ್ಠರಿಗೆ ಆದ್ಯತೆ:
ಜಗದೀಪ್ ಧನಕರ್ ಅವರ ವರ್ತನೆಯಿಂದ ಮುಜುಗರಕ್ಕೊಳಗಾಗಿರುವ ಬಿಜೆಪಿ ವರಿಷ್ಠರು ಈ ಬಾರಿ ಪಕ್ಷದ ನಿಷ್ಠಾವಂತರಿಗೆ ಆದ್ಯತೆ ನೀಡಲು ನಿರ್ಧರಿಸಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಮತ್ತು ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಇದರ ಜೊತೆಗೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ, ಬಿಹಾರ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್, ಮತ್ತು ಆರ್‌ಎಸ್‌ಎಸ್ ನಾಯಕ ಶೇಷಾದ್ರಿಚಾರಿ ಅವರ ಹೆಸರುಗಳೂ ಕೇಳಿಬಂದಿವೆ.