ಹೈದರಾಬಾದ್: ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣ ಖಾತೆಗಳನ್ನು ಸ್ಥಗಿತಗೊಳಿಸಿರುವುದನ್ನು ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹೈದರಾಬಾದ್ನಲ್ಲಿರುವ ಮೆಟಾ ಕಚೇರಿ ಎದುರು ಭಾರೀ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ವೇಳೆ ಉದ್ರಿಕ್ತರಾದ ಕೆಲ ಕಾರ್ಯಕರ್ತರು ಕಚೇರಿ ಆವರಣದಲ್ಲಿದ್ದ ಹೂವಿನ ಕುಂಡಗಳನ್ನು ಎಸೆದು ಧ್ವಂಸಗೊಳಿಸಿದ್ದಾರೆ. ಈ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಹಾಗೂ ರಾಷ್ಟ್ರೀಯ ಉಸ್ತುವಾರಿ ಮನೀಶ್ ಶರ್ಮಾ ಅವರ ಸಾಮಾಜಿಕ ಜಾಲತಾಣ ಖಾತೆಗಳಿಗೆ ಮೆಟಾ ನಿರ್ಬಂಧ ವಿಧಿಸಿದೆ. ಇದನ್ನು ವಿರೋಧಿಸಿ ತೆಲಂಗಾಣ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಕ್ಕಿಡಿ ಶಿವಚರಣ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಮೆಟಾ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ
ಹೈದರಾಬಾದ್ನ ಮೆಟಾ ಕಚೇರಿ ಎದುರು ಜಮಾಯಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಮೆಟಾ ಸಂಸ್ಥೆ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ರಾಜಕೀಯ ಕಾರಣಗಳಿಗಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಅಭಿಪ್ರಾಯ ವ್ಯಕ್ತಪಡಿಸುವ ನಾಯಕರ ಧ್ವನಿಯನ್ನು ಅಡಗಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಸಾಮಾಜಿಕ ಮಾಧ್ಯಮ ವೇದಿಕೆಗಳು ಯಾವುದೇ ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡಬಾರದು. ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ನಾಯಕರ ಖಾತೆಗಳನ್ನು ನಿರ್ಬಂಧಿಸಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಹಲ್ಲೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಒಂದು ವಾರದೊಳಗೆ ಸ್ಥಗಿತಗೊಂಡಿರುವ ಸಾಮಾಜಿಕ ಜಾಲತಾಣ ಖಾತೆಗಳನ್ನು ಮರುಸ್ಥಾಪಿಸಬೇಕು ಹಾಗೂ ಡಿಲೀಟ್ ಆಗಿರುವ ಪೋಸ್ಟ್ಗಳನ್ನು ಪುನಃಸ್ಥಾಪಿಸಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ. ತಮ್ಮ ಬೇಡಿಕೆ ಈಡೇರದಿದ್ದರೆ ನ್ಯಾಯಾಲಯದ ಮೊರೆ ಹೋಗುವುದರ ಜೊತೆಗೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆ ವೇಳೆ ಕೆಲ ಕಾರ್ಯಕರ್ತರು ಮೆಟಾ ಕಚೇರಿ ಆವರಣದಲ್ಲಿದ್ದ ಹೂವಿನ ಕುಂಡಗಳನ್ನು ಎಸೆದು ಧ್ವಂಸಗೊಳಿಸಿದ್ದಾರೆ.
ಮುಂಬೈನಲ್ಲೂ ಮೆಟಾ ಕಚೇರಿ ಎದುರು ಪ್ರತಿಭಟನೆ
ಕೇವಲ ಹೈದರಾಬಾದ್ಗೆ ಮಾತ್ರ ಸೀಮಿತವಾಗದ ಈ ಪ್ರತಿಭಟನೆ ಮುಂಬೈನಲ್ಲೂ ನಡೆದಿದೆ. ಯುವ ಕಾಂಗ್ರೆಸ್ ನಾಯಕರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಸ್ಥಗಿತಗೊಳಿಸಿರುವುದನ್ನು ಖಂಡಿಸಿ ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ನಲ್ಲಿರುವ (BKC) ಮೆಟಾ ಕಚೇರಿ ಎದುರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಮುಂಬೈ ಯುವ ಕಾಂಗ್ರೆಸ್ ಅಧ್ಯಕ್ಷೆ ಜೀನತ್ ಶಬ್ರಿನ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ಟೀಕೆ ಮಾಡುವ ಧ್ವನಿಗಳನ್ನು ಅಡಗಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ಬಂಧಿಸಲಾಗಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.
ಪ್ರತಿಭಟನೆಯ ವೇಳೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರ ಪೋಸ್ಟರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮೆಟಾ ಸಂಸ್ಥೆ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ ಘೋಷಣೆಗಳನ್ನು ಕೂಗಿದ್ದಾರೆ.
ಮೆಟಾ ವಿರುದ್ಧ ಅಖಿಲೇಶ್ ಯಾದವ್ ಕಿಡಿ
ಈ ವಿವಾದ ರಾಜಕೀಯವಾಗಿ ಮತ್ತಷ್ಟು ವಿಸ್ತರಿಸಿದ್ದು, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಮೆಟಾ ಸಂಸ್ಥೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಅವರು, ವಿದೇಶಿ ಕಂಪನಿಗಳು ಭಾರತದಲ್ಲಿ ರಾಜಕೀಯ ಮಾಡುವ ಬದಲು ವ್ಯವಹಾರಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.
ಭಾರತದಲ್ಲಿ ಕಾರ್ಯನಿರ್ವಹಿಸುವ ವಿದೇಶಿ ಕಂಪನಿಗಳು ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಯಾವುದೇ ರಾಜಕೀಯ ಪಕ್ಷದ ಪರವಾಗಿ ತಾರತಮ್ಯ ಮಾಡಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ಸರ್ಕಾರವೂ ವಿದೇಶಿ ಕಂಪನಿಗಳ ಮೇಲೆ ಅನಗತ್ಯ ಒತ್ತಡ ಹೇರುವ ಮೂಲಕ ಅವುಗಳ ವ್ಯವಹಾರವನ್ನು ರಾಜಕೀಯಗೊಳಿಸಬಾರದು ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ
ಇನ್ನು ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಹಾಗೂ ಮೆಟಾ ಕಚೇರಿಯಲ್ಲಿ ನಡೆದ ಧ್ವಂಸ ಕೃತ್ಯವನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ, ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಗೂಂಡಾಗಳು ಎಂದು ಟೀಕಿಸಿದ್ದಾರೆ.
ಹೈದರಾಬಾದ್ನಲ್ಲಿರುವ ಮೆಟಾ ಕಚೇರಿ ಮೇಲೆ ಯುವ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿದ್ದು, ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ಕಾರ್ಯವೈಖರಿಯೇ ಇದು ಎಂದು ಕಿಡಿಕಾರಿದ್ದಾರೆ.
