ದುಬೈ: ಸೆಪ್ಟೆಂಬರ್ 9ರಿಂದ ಆರಂಭವಾಗಲಿರುವ ಏಷ್ಯಾ ಕಪ್ 2025 ಕ್ರಿಕೆಟ್ ಟೂರ್ನಮೆಂಟ್‌ಗೆ ಭಾರತ ತಂಡ ಭರ್ಜರಿ ತಯಾರಿ ನಡೆಸುತ್ತಿದೆ. ಟೀಮ್ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಹೊಸ ಹೇರ್ ಸ್ಟೈಲ್‌ನಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಗಮನ ಸೆಳೆದಿದ್ದಾರೆ. ಮರಳು ಹೊಂಬಣ್ಣದ ಶಾರ್ಟ್ ಹೇರ್‌ಕಟ್‌ನೊಂದಿಗೆ ಕಾಣಿಸಿಕೊಂಡಿರುವ ಪಾಂಡ್ಯ, ಇನ್‌ಸ್ಟಾಗ್ರಾಮ್‌ನಲ್ಲಿ ‘ನ್ಯೂ ಮಿ’ ಎಂದು ಬರೆದುಕೊಂಡು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಹೊಸ ಲುಕ್‌ನಲ್ಲಿ ಅವರು ಪಾಪ್ ಸಿಂಗರ್‌ನಂತೆ ಕಾಣುತ್ತಿದ್ದಾರೆ ಎಂದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಶುಕ್ರವಾರದಿಂದ ದುಬೈನಲ್ಲಿ ಟೀಮ್ ಇಂಡಿಯಾ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ಕೋಚ್ ಗೌತಮ್ ಗಂಭೀರ್ ಅವರ ಮಾರ್ಗದರ್ಶನದಲ್ಲಿ ನಾಯಕ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಸೇರಿದಂತೆ ಎಲ್ಲ ಆಟಗಾರರು ಲಘು ಬ್ಯಾಟಿಂಗ್ ಮತ್ತು ಬೌಲಿಂಗ್ ಅಭ್ಯಾಸದಲ್ಲಿ ತೊಡಗಿದ್ದಾರೆ. ಶನಿವಾರದಿಂದ ತಂಡವು ಕಠಿಣ ತರಬೇತಿಯಲ್ಲಿ ತೊಡಗಲಿದೆ, ಏಕೆಂದರೆ ಏಷ್ಯಾ ಕಪ್‌ನ ಮೊದಲ ಪಂದ್ಯವನ್ನು ಭಾರತ ತಂಡ ಸೆಪ್ಟೆಂಬರ್ 10ರಂದು ಯುಎಇ ವಿರುದ್ಧ ಆಡಲಿದೆ.
ಈ ಬಾರಿಯ ಏಷ್ಯಾ ಕಪ್ ಟಿ20 ಸ್ವರೂಪದಲ್ಲಿ ನಡೆಯಲಿದ್ದು, ಭಾರತದ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಈ ಟೂರ್ನಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಈ ಮೂವರು ಆಟಗಾರರು ಈಗಾಗಲೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಹೀಗಾಗಿ, ಯುವ ಆಟಗಾರರ ನೇತೃತ್ವದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ.
ಟೂರ್ನಿಯಲ್ಲಿ ಒಟ್ಟು ಎಂಟು ತಂಡಗಳು ಭಾಗವಹಿಸುತ್ತಿವೆ, ಇವುಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ‘ಎ’ ಗುಂಪಿನಲ್ಲಿ ಭಾರತ, ಪಾಕಿಸ್ತಾನ, ಯುಎಇ, ಮತ್ತು ಒಮಾನ್ ತಂಡಗಳು ಸ್ಥಾನ ಪಡೆದಿವೆ. ಇನ್ನು ‘ಬಿ’ ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ಮತ್ತು ಹಾಂಗ್ ಕಾಂಗ್ ತಂಡಗಳು ಕಾಣಿಸಿಕೊಂಡಿವೆ.
