ಅಹಮದಾಬಾದ್, ಮಾರ್ಚ್ 8: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ರಾತ್ರಿ ನಡೆಯಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ 2026ರ ಬಹುನಿರೀಕ್ಷಿತ ಫೈನಲ್ ಪಂದ್ಯಕ್ಕೂ ಮುನ್ನವೇ ಅಹಮದಾಬಾದ್ ಪೊಲೀಸರು ದೊಡ್ಡ ಕಾರ್ಯಾಚರಣೆ ನಡೆಸಿದ್ದಾರೆ. ಪಂದ್ಯದ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ (Black Market) ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ನಗರ ಅಪರಾಧ ಶಾಖೆಯ (Crime Branch) ಅಧಿಕಾರಿಗಳು ಬಂಧಿಸಿದ್ದಾರೆ.
ಪೊಲೀಸರು ನೀಡಿದ ಮಾಹಿತಿಯಂತೆ, ಉಸ್ಮಾನಪುರ ಪ್ರದೇಶದಲ್ಲಿರುವ ಗುಜರಾತ್ ವಿದ್ಯಾಪೀಠ ಎಸ್.ಟಿ. ಬಸ್ ನಿಲ್ದಾಣದ ಬಳಿ ಆರೋಪಿಗಳು ಟಿಕೆಟ್‌ಗಳನ್ನು ಕಾಳಸಂತೆ ಮೂಲಕ ಮಾರಾಟ ಮಾಡುತ್ತಿರುವುದು ಪತ್ತೆಯಾಯಿತು. ತಕ್ಷಣವೇ ಬಲೆ ಬೀಸಿದ ಅಪರಾಧ ಶಾಖೆ ಅಧಿಕಾರಿಗಳು ಇಬ್ಬರನ್ನು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಅವರ ಬಳಿ ಇದ್ದ ಎಂಟು ಟಿ20 ವಿಶ್ವಕಪ್ ಫೈನಲ್ ಪಂದ್ಯದ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ತನಿಖೆಯಲ್ಲಿ ಆರೋಪಿಗಳು ಆನ್‌ಲೈನ್ ಮೂಲಕ ಮುಂಚಿತವಾಗಿ ಟಿಕೆಟ್‌ಗಳನ್ನು ಖರೀದಿಸಿ ನಂತರ ಅಭಿಮಾನಿಗಳಿಗೆ ಮೂಲ ಬೆಲೆಗಿಂತ ಮೂರರಷ್ಟು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದರೆಂದು ತಿಳಿದುಬಂದಿದೆ. ಒಂದೊಂದು ಟಿಕೆಟ್‌ಗೆ ಸುಮಾರು ₹10,000 ವರೆಗೆ ದರ ಕೇಳಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಮೂಲಕ ತ್ವರಿತವಾಗಿ ಲಾಭ ಗಳಿಸಲು ಆರೋಪಿಗಳು ಪ್ರಯತ್ನಿಸುತ್ತಿದ್ದರು ಎನ್ನಲಾಗಿದೆ. ಪೊಲೀಸರು ಎಲ್ಲಾ ಟಿಕೆಟ್‌ಗಳನ್ನು ವಶಪಡಿಸಿಕೊಂಡು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಟಿ20 ವಿಶ್ವಕಪ್ ಫೈನಲ್ ಪಂದ್ಯ ಹಿನ್ನೆಲೆಯಲ್ಲಿ ಅಹಮದಾಬಾದ್ ನಗರದಲ್ಲಿ ಭದ್ರತೆಯನ್ನು ಕಟ್ಟು ನಿಟ್ಟಾಗಿ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್. ಮಲಿಕ್, ಕಾಳಸಂತೆ ಮೂಲಕ ಟಿಕೆಟ್ ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.
“ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐತಿಹಾಸಿಕ ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕಾಗಿ ಎಲ್ಲಾ ಭದ್ರತಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಯಾವುದೇ ರೀತಿಯ ಅಕ್ರಮ ಚಟುವಟಿಕೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ” ಎಂದು ಪೊಲೀಸ್ ಆಯುಕ್ತ ಮಲಿಕ್ ತಿಳಿಸಿದ್ದಾರೆ.
ಪಂದ್ಯವನ್ನು ಗಮನದಲ್ಲಿಟ್ಟುಕೊಂಡು ಸುಮಾರು 3,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ಸುಮಾರು 1,000 ಗೃಹರಕ್ಷಕರನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಕ್ರೀಡಾಂಗಣದ ಒಳಭಾಗ ಹಾಗೂ ಹೊರಭಾಗಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲಾಗಿದ್ದು, ಅಭಿಮಾನಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಇಂದು ರಾತ್ರಿ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿರುವ ಈ ಫೈನಲ್ ಪಂದ್ಯಕ್ಕೆ ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಪ್ರೇಕ್ಷಕರು ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸುವ ನಿರೀಕ್ಷೆಯಿದೆ.





