ನೀಟ್ ಹಗರಣ: ವಿನೀತ್ ಜೋಶಿ ವಜಾ, ಗಂಗ್ವಾರ್ ನೇಮಕ

ಶಿ

ನವದೆಹಲಿ, ಜುಲೈ (24 ) : ದೇಶಾದ್ಯಂತ ಭಾರೀ ವಿವಾದ ಮತ್ತು ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಆಡಳಿತಾತ್ಮಕ ಕ್ರಮ ಕೈಗೊಂಡಿದೆ. ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿದ್ದ ವಿನೀತ್ ಜೋಶಿ ಅವರನ್ನು ಆ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ನರೇಶ್ ಪಾಲ್ ಗಂಗ್ವಾರ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ತಡರಾತ್ರಿ ಹೊರಬಿದ್ದ ಆದೇಶದ ಪ್ರಕಾರ, 1994ರ ರಾಜಸ್ಥಾನ ಕೇಡರ್‌ನ ಭಾರತೀಯ ಆಡಳಿತ ಸೇವೆ (IAS) ಅಧಿಕಾರಿ ನರೇಶ್ ಪಾಲ್ ಗಂಗ್ವಾರ್ ಅವರು ನೂತನ ಉನ್ನತ ಶಿಕ್ಷಣ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಆಡಳಿತ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಅವರು ಈ ಹಿಂದೆ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಜೊತೆಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. ರಾಜಸ್ಥಾನ ಸರ್ಕಾರದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ ಅನುಭವವೂ ಅವರಿಗೆ ಇದೆ.

ಇನ್ನೊಂದೆಡೆ, 1992ರ ಮಣಿಪುರ ಕೇಡರ್‌ನ ಐಎಎಸ್ ಅಧಿಕಾರಿ ವಿನೀತ್ ಜೋಶಿ ಅವರನ್ನು ಉನ್ನತ ಶಿಕ್ಷಣ ಇಲಾಖೆಯಿಂದ ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬಳಿಕ ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸ ಕುಸಿದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ವಿಶೇಷ ಮಹತ್ವ ಸಿಕ್ಕಿದೆ.

ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಹಲವು ಸಂಘಟನೆಗಳು ಜಂತರ್ ಮಂತರ್‌ನಲ್ಲಿ ಧರಣಿ ನಡೆಸಿದ್ದವು. ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಕೂಡ ಪ್ರತಿಭಟನೆಗೆ ಬೆಂಬಲ ಸೂಚಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.

ಈ ಬೆಳವಣಿಗೆಗಳ ನಡುವೆ ಕೇಂದ್ರ ಸರ್ಕಾರದ ಕ್ರಮವನ್ನು ಹಲವು ರಾಜಕೀಯ ನಾಯಕರು ಸ್ವಾಗತಿಸಿದ್ದಾರೆ. ಬಿಜೆಪಿ ಸಂಸದ ಡಾ. ನಿಶಿಕಾಂತ್ ದುಬೆ ಪ್ರತಿಕ್ರಿಯಿಸಿ, ಪರೀಕ್ಷಾ ಅಕ್ರಮದ ವಿಚಾರದಲ್ಲಿ ಯಾವುದೇ ಹಂತದ ಅಧಿಕಾರಿಗಳ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಸರ್ಕಾರ ನೀಡಿದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜವಾಬ್ದಾರಿತನಕ್ಕೆ ಆದ್ಯತೆ ನೀಡುತ್ತಿದ್ದು, ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನೀಟ್ ಹಗರಣದ ನಂತರ ಕೈಗೊಳ್ಳಲಾದ ಈ ಆಡಳಿತಾತ್ಮಕ ಬದಲಾವಣೆ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ಮರುಸ್ಥಾಪಿಸುವ ಪ್ರಯತ್ನವೆಂದು ಪರಿಗಣಿಸಲಾಗಿದೆ.

Exit mobile version