ರಾಮನಗರ: ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ದೇಗುಲ ಪ್ರವೇಶ ನಿರಾಕರಣೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದೊಡ್ಡಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿಖಿಲ್ ಕುಮಾರಸ್ವಾಮಿ ಅವರು ದೇಗುಲಕ್ಕೆ ಬರುತ್ತಿದ್ದಾರೆ ಎಂಬ ವಿಷಯ ತಿಳಿದು, ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ದೇವಾಲಯಕ್ಕೆ ಬೀಗ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕಾಂಗ್ರೆಸ್ ಕಾರ್ಯಕರ್ತ ರವಿ ಎಂಬಾತನಿಂದ ದೇವಾಲಯಕ್ಕೆ ಬೀಗ ಹಾಕಲಾಗಿದೆ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ರಾಮು ಆರೋಪಿಸಿದ್ದಾರೆ. ಈ ಬೆಳವಣಿಗೆ ಜೆಡಿಎಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದ್ದು, ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಆಗಿದ್ದೇನು?
ನಿನ್ನೆ ದೊಡ್ಡಕುರುಬರಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮಾರಮ್ಮ ದೇವಾಲಯದ ಉದ್ಘಾಟನೆ ಹಾಗೂ ಕುಂಭಾಭಿಷೇಕ ಕಾರ್ಯಕ್ರಮ ನಿಗದಿಯಾಗಿತ್ತು. ಈ ಹಿನ್ನೆಲೆ ದೇವಾಲಯಕ್ಕೆ ನಿಖಿಲ್ ಭೇಟಿ ನೀಡಿದ್ದರು. ಆದರೆ ನಿಖಿಲ್ ಭೇಟಿ ವೇಳೆ ದೇವಾಲಯಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬೀಗ ಜಡಿದಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ನಿಖಿಲ್ ಅವರು ದೇವರ ದರ್ಶನ ಪಡೆಯದೆಯೇ ವಾಪಸ್ ತೆರಳಿದ್ದಾರೆ.
ಬಳಿಕ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಸ್ಥಳೀಯ ಪೊಲೀಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಕಾಂಗ್ರೆಸ್‌ನವರು ಹೆಚ್ಚು ಅನುದಾನ ಕೊಟ್ಟಿದ್ದಾರೆ ಎಂಬ ಕಾರಣಕ್ಕೆ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ.
ಶಾಸಕ ಇಕ್ಬಾಲ್ ಹುಸೇನ್ ಖಂಡನೆ
ಈ ಘಟನೆ ಕುರಿತು ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿ, ಘಟನೆಯನ್ನು ಖಂಡಿಸಿದ್ದಾರೆ. “ದೇವಾಲಯಕ್ಕೆ ಬೀಗ ಹಾಕಿರುವುದು ತಪ್ಪು. ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈ ರೀತಿ ನಡೆದುಕೊಳ್ಳಬಾರದು. ಇಂತಹ ಘಟನೆಗಳಿಗೆ ನಾನು ಎಂದಿಗೂ ಪ್ರಚೋದನೆ ನೀಡುವುದಿಲ್ಲ, ನನಗೆ ಅದು ಇಷ್ಟವೂ ಇಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೇಗುಲಕ್ಕೆ ಇಬ್ಬರಿಂದಲೂ ಅನುದಾನ
ಮಾಹಿತಿ ಪ್ರಕಾರ, ಈ ದೇವಾಲಯದ ನಿರ್ಮಾಣಕ್ಕೆ ನಿಖಿಲ್ ಕುಮಾರಸ್ವಾಮಿ ಮತ್ತು ಶಾಸಕ ಇಕ್ಬಾಲ್ ಹುಸೇನ್ ಇಬ್ಬರಿಂದಲೂ ಅನುದಾನ ಬಂದಿದೆ. ಆದರೆ ನಿಖಿಲ್ ಕುಮಾರಸ್ವಾಮಿ ಅವರು ಇಕ್ಬಾಲ್ ಹುಸೇನ್‌ಗಿಂತ ಮೊದಲೇ ದೇಗುಲಕ್ಕೆ ಆಗಮಿಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ. ಈ ಹಿನ್ನೆಲೆ ರಾಜಕೀಯ ಉದ್ದೇಶದಿಂದ ದೇವಾಲಯಕ್ಕೆ ಬೀಗ ಹಾಕಲಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.
ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ
ಘಟನೆಯಿಂದ ಆಕ್ರೋಶಗೊಂಡ ಜೆಡಿಎಸ್ ಕಾರ್ಯಕರ್ತರು ದೊಡ್ಡಕುರುಬರಹಳ್ಳಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ದೇವಾಲಯದ ಬಾಗಿಲನ್ನು ತೆರೆಯುವಂತೆ ಒತ್ತಾಯಿಸಿದ್ದಾರೆ. ಸ್ಥಳದಲ್ಲಿ ಕೆಲಕಾಲ ಉದ್ವಿಗ್ನತೆ ನೆಲೆಸಿತ್ತು. ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರೂ ಪಕ್ಷಗಳ ಕಾರ್ಯಕರ್ತರನ್ನು ಸಮಾಧಾನಪಡಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.





