ಬೆಂಗಳೂರು: ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ. ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಅಷ್ಟೇ ಅಲ್ಲ, ಮುಂದಿನ ಎರಡು ವಾರಗಳೊಳಗೆ ಶರಣಾಗುವಂತೆ ಸೂಚನೆ ನೀಡಿದೆ. ಇದರಿಂದ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲು ಸೇರುವುದು ಬಹುತೇಕ ಖಚಿತವಾಗಿದೆ.
ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಚಂದ್ರಶೇಖರ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠ ಈ ಮಹತ್ವದ ಆದೇಶ ನೀಡಿದೆ. ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಜೊತೆಗೆ ಜಾಮೀನು ಮಂಜೂರು ಮಾಡಿತ್ತು. ಇದೀಗ ಹೈಕೋರ್ಟ್ ನೀಡಿದ್ದ ಈ ಆದೇಶವನ್ನೇ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.





